ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Nov 09, 2026, 02:00 AM IST
ಬಳ್ಳಾರಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾವಲುಪಡೆಯ ಬಳ್ಳಾರಿ ಜಿಲ್ಲಾ ಯುವ ಘಟಕದ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆ.18 ಮತ್ತು ಸೆ.16ರಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪರವಾನಗಿ ಇಲ್ಲದೆ ನಡೆಯುತ್ತಿರುವ ಕ್ಲಿನಿಕ್‌ ಮುಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾವಲುಪಡೆಯ ಬಳ್ಳಾರಿ ಜಿಲ್ಲಾ ಯುವ ಘಟಕದ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ವಿ.ಎಸ್.ಸಾಗರ್ ಅಪ್ಪು, ಜಿಲ್ಲೆಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ನಕಲಿ ವೈದ್ಯರು ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಕ್ಲಿನಿಕ್‌ ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಸ್ಥಳೀಯರು ಹಾಗೂ ಹೊರರಾಜ್ಯಗಳಿಂದ ಬಂದವರು ವೈದ್ಯರ ಸೋಗಿನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ರೋಗಿಗಳಿಂದ ಮನಬಂದಂತೆ ₹500ರಿಂದ ₹700 ಶುಲ್ಕ ವಸೂಲಿ ಮಾಡುತ್ತಿದ್ದು, ಪ್ರಶ್ನಿಸುವ ಸಾರ್ವಜನಿಕರಿಗೆ ಸ್ಥಳೀಯ ರೌಡಿಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆ.18 ಮತ್ತು ಸೆ.16ರಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸೆ.17ರಂದು ತೋರಣಗಲ್ಲು ವ್ಯಾಪ್ತಿಯಲ್ಲಿ ಇಬ್ಬರು ನಕಲಿ ವೈದ್ಯರ ಮೇಲೆ ದಾಳಿ ನಡೆಸಿದರೂ ಈವರೆಗೆ ಎಫ್‌ಐಆರ್ ದಾಖಲಿಸಿಲ್ಲ. ಸಾಕ್ಷಿದಾರರಿಗೂ ಬೆದರಿಕೆ ಹಾಕಲಾಗುತ್ತಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂದು ದೂರಿದರು.

ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನಕಲಿ ವೈದ್ಯರ ನಡುವಿನ ಸಂಬಂಧದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ ಅವರು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಸುರೇಶ್, ಸೀನಪ್ಪ, ಪವನ್, ಶರತ್, ಜಯಣ್ಣ, ವೀರೇಶ್, ಅರವಿಂದ್, ಜಾನ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ