ಕೊಪ್ಪಳ:
ರಾಜ್ಯದಲ್ಲಿ ಇತ್ತೀಚೆಗೆ ಬಾಲಗರ್ಭಿಣಿ ಪ್ರಕರಣ ವರದಿಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಬಾಲ್ಯ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜಿಲ್ಲಾಧಿಕಾರಿ, ಜಿಪಂ ಸಿಇಒಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದ್ದಾರೆ. ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣ ತಡೆಗೆ ಜನರಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಬೇಕು. ಈ ಹಿನ್ನೆಲೆ ಎಲ್ಲ ಗ್ರಾಪಂಗಳಲ್ಲಿ ಕಾವಲು ಸಮಿತಿ ಸಭೆ ಕೈಗೊಂಡು ಶಾಲಾ-ಕಾಲೇಜು, ಮಹಿಳಾ ಸ್ವ-ಸಹಾಯ ಸಂಘ ಸಂಸ್ಥೆ, ಜನರನ್ನು ಸೇರಿಸಿ ಬಾಲ್ಯವಿವಾಹ ಕಾನೂನು ಬಾಹಿರ ಎಂಬುದರ ಕುರಿತು ಅರಿವು ಮೂಡಿಸಬೇಕೆಂದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಮಾತನಾಡಿ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಪೊಲೀಸ್ ಅಧಿಕಾರಿ ತನ್ನ ವ್ಯಾಪ್ತಿಯಲ್ಲಿ ನಡೆದ ಬಾಲ್ಯವಿವಾಹದ ಮಾಹಿತಿ ಗಮನಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕ್ರಮಕೈಗೊಳ್ಳಬೇಕು. ಜತೆಗೆ ಬಾಲ್ಯವಿವಾಹ ನಿಷೇಧ ಅಧಿಕಾರಿಗಳು ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಹೇಮಂತಕುಮಾರ್, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಂತಸ್ವಾಮಿ ಪೂಜಾರ ಸೇರಿದಂತೆ ಇತರರು ಇದ್ದರು.