ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ, ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳಿ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jul 05, 2024, 12:46 AM IST
4ಕೆಎಂಎನ್ ಡಿ14 | Kannada Prabha

ಸಾರಾಂಶ

ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ರೋಗಗಳಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮಗಳ ಹಂತದಲ್ಲಿ ಆಯಾ ಗ್ರಾಪಂ ಪಿಡಿಒಗಳ ಸಹಕಾರದಿಂದ ಕುಡಿಯುವ ನೀರಿನ ಮಾದರಿ ಪರೀಕ್ಷೆ, ಸ್ವಚ್ಛತೆ ಕಾಪಾಡುವುದು ಹಾಗೂ ಜನರಲ್ಲಿ ರೋಗಗಳ ಬಗ್ಗೆ ಅರಿವು ಮೂಡಿಸಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಶಾಸಕ ಕೆ.ಎಂ. ಉದಯ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಸಂಜೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕರು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಂತೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ರೋಗಗಳಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮಗಳ ಹಂತದಲ್ಲಿ ಆಯಾ ಗ್ರಾಪಂ ಪಿಡಿಒಗಳ ಸಹಕಾರದಿಂದ ಕುಡಿಯುವ ನೀರಿನ ಮಾದರಿ ಪರೀಕ್ಷೆ, ಸ್ವಚ್ಛತೆ ಕಾಪಾಡುವುದು ಹಾಗೂ ಜನರಲ್ಲಿ ರೋಗಗಳ ಬಗ್ಗೆ ಅರಿವು ಮೂಡಿಸುವಂತೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ರೋಗ ಉಲ್ಬಣಗೊಳ್ಳದಂತೆ ಕೆಲಸ ಮಾಡಬೇಕು ಎಂದರು.

ಅಪ್ರಾಪ್ತ ಮಕ್ಕಳ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆ ಆದಷ್ಟು ಕೊಳಚೆ ಪ್ರದೇಶಗಳ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಮದ್ದೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಕೆಲವೊಂದು ಅನೈತಿಕ ಚಟುವಟಿಕೆಗಳು ಮತ್ತು ಶಾಲೆಗಳಲ್ಲಿ ಪೀಠೋಪಕರಣಗಳ ಕಳವು ಪ್ರಕರಣಗಳ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಕಾಳೀರಯ್ಯ ಶಾಸಕರಿಗೆ ಪೊಲೀಸರ ಎದುರೇ ದೂರು ನೀಡಿದರು. ನಂತರ ಶಾಸಕರು ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಆದೇಶ ನೀಡಿದರು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಅಂಗನವಾಡಿ ಕಟ್ಟಡ ನಿರ್ಮಾಣ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಪಟ್ಟಿ ನೀಡುವಂತೆ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ್ ಅವರಿಗೆ ಸೂಚನೆ ನೀಡಿದರು.

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಿ ಇಲಾಖೆ, ಸಿಡಿಪಿಒ ಕಚೇರಿ ಸೇರಿದಂತೆ ಹಲವು ಇಲಾಖೆಗಳಿಂದ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಇಂತಹ ಇಲಾಖೆಗಳಿಗೆ ರೇಷ್ಮೆ ಇಲಾಖೆ ಕಟ್ಟಡದಲ್ಲಿ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸರ್ಕಾರದ ಮಾನದಂಡ ಆಧರಿಸಿ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಶಾಸಕ ಉದಯ್ ಭರವಸೆ ನೀಡಿದರು.

ತಾಪಂ ಆಡಳಿತ ಅಧಿಕಾರಿ ಕೆ.ಪಿ. ಸಂಜೀವಪ್ಪ ಮಾತನಾಡಿ, ಸರ್ಕಾರದ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಅನುಷ್ಠಾನ ಗೊಳಿಸುವ ಜೊತೆಗೆ ವಿವಿಧ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ತಾಪಂ ಇಒ ಎಲ್.ಸಂದೀಪ್, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಕೃಷಿ ಅಧಿಕಾರಿ ಪರಮೇಶ್, ತೋಟಗಾರಿಕೆ ಹಿರಿಯ ಸಹಾಯಕ ಅಧಿಕಾರಿ ರೇಖಾ, ಆರೋಗ್ಯ ಅಧಿಕಾರಿ ರವೀಂದ್ರ ಬಿ.ಗೌಡ, ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಪರ್ಧಾಳುಗಳಿಗೆ ಆತ್ಮಸ್ಥೈರ್ಯ, ತಾಳ್ಮೆ ಅಗತ್ಯ: ಅಕ್ಷಯ ಪಾಟೀಲ
ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ತಲಾದಾಯ ಹೆಚ್ಚಳ