ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಕೋನರಡ್ಡಿ ಸೂಚನೆ

KannadaprabhaNewsNetwork | Published : Apr 10, 2025 1:02 AM

ಸಾರಾಂಶ

ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಹುಬ್ಬಳ್ಳಿ: ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಅವರು ಇಲ್ಲಿನ ತಾಲೂಕು ಆಡಳಿತ ಸೌಧದ ತಾಪಂ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ವ್ಯವಸ್ಥಿತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಗಮನ ಹರಿಸಬೇಕಾಗಿದೆ. ಗ್ರಾಮಗಳ ಅಭಿವೃದ್ಧಿ ಹೊಣೆ ಅಧಿಕಾರಿಗಳ ಮೇಲಿದೆ. ತಹಸೀಲ್ದಾರರು ಹಾಗೂ ತಾಪಂ ಇಒಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ ಸೂಚನೆ ನೀಡಿದರು.

ಕೆರೆಗಳಿಗೆ ಮೀನು ಬಿಟ್ಟು ನೀರನ್ನು ಶುದ್ಧೀಕರಿಸಬೇಕಾಗುತ್ತದೆ. ಜಲಜೀವನ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಹೊಂದಿದ್ದಾರೆ. ಹೀಗಾಗಿ, ಯಾವುದೇ ರೀತಿಯಲ್ಲಿ ಅಲಕ್ಷ್ಯ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಣ್ಣಿಗೇರಿ ಪಟ್ಟಣ 24*7 ನಿರಂತರ ಕುಡಿಯುವ ನೀರು ಒದಗಿಸುವಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಒರಿಸ್ಸಾದ ಪುರಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದರಂತೆ ನವಲಗುಂದ ಪಟ್ಟಣಕ್ಕೆ 24*7 ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರಿನಿಂದ ಜನರಿಗೆ ಕಾಯಿಲೆಗಳು ಬರದಂತೆ ಎಚ್ಚರ ವಹಿಸಬೇಕಾಗಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗಬಾರದು. ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೆರೆಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರು ಒದಗಿಸಲು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂದರು.

ಈ ವೇಳೆ ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಿವಾನಂದ ಭೂಮಣ್ಣವರ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಜೆ.ಬಿ. ಮಜ್ಜಗಿ, ನವಲಗುಂದ ತಹಸೀಲ್ದಾರ್‌ ಸುಧೀರ ಸಾಹುಕಾರ, ಅಣ್ಣಿಗೇರಿ ತಹಸೀಲ್ದಾರ್ ಎಂ.ಜಿ. ದಾಸಪ್ಪನವರ, ಹುಬ್ಬಳ್ಳಿ ತಾಪಂ ಇಒ ಯಶವಂತಕುಮಾರ, ನವಲಗುಂದ ತಾಪಂ ಇಒ ಭಾಗ್ಯಶ್ರೀ ಜಹಗೀರದಾರ್, ಹೆಸ್ಕಾಂನ ಎಇಇ ಕಿರಣಕುಮಾರ, ಸಿಪಿಐ ಮುರಗೇಶ ಚನ್ನಣ್ಣವರ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಪಂ ಪಿಡಿಒಗಳು, ಇತರರು ಹಾಜರಿದ್ದರು.

Share this article