ಕಾಡುಪ್ರಾಣಿಗಳ ಹಾವಳಿ ತಡೆಗೆ ಕ್ರಮವಹಿಸಿ

KannadaprabhaNewsNetwork |  
Published : Dec 24, 2025, 02:00 AM IST
ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಸೂಚನೆ ನೀಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ, ಅರಣ್ಯ, ಕುಡಿಯುವ ನೀರು ಹಾಗೂ ಇನ್ನಿತರ ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾಡುಪ್ರಾಣಿಗಳು ಪದೇ ಪದೇ ಅರಣ್ಯದಿಂದ ಹೊರಬಂದು ಜನವಸತಿ, ಜಮೀನು ಪ್ರದೇಶಗಳ ಬಳಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಜನರು ಭಯಬೀತರಾಗಿದ್ದಾರೆ. ಗ್ರಾಮಸ್ಥರ ಜಾನುವಾರುಗಳಿಗೆ ರಕ್ಷಣೆ ಆಗಬೇಕಿದೆ. ಜನರ ಜೀವಕ್ಕೆ ಯಾವುದೇ ತೊಂದರೆಯಾಗದಂತೆ ಕೂಡಲೇ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತಕ್ಷಣದಲ್ಲಿಯೇ ಕೈಗೊಳ್ಳಬೇಕು. ಜನರ ಆತಂಕ ದೂರ ಮಾಡಬೇಕೆಂದು ತಿಳಿಸಿದರು.

ಪ್ರಾಣಿಗಳ ಚಲನ ವಲನ ಮೇಲೆ ನಿಗಾ ಇಡಲು ಜಿಲ್ಲೆಯ ಪ್ರತಿ ವನ್ಯಜೀವಿ ವಿಭಾಗಕ್ಕೆ ಪ್ರತ್ಯೇಕ ಅತ್ಯಾಧುನಿಕ ಥರ್ಮಲ್ ಡ್ರೋನ್ ಗಳು ಅವಶ್ಯಕತೆಯಿದೆ. ಜಿಲ್ಲೆಗೆ ಪ್ರತ್ಯೇಕ ಚಿರತೆ ಟಾಸ್ಕ್ ಪೋರ್ಸ್ ಸಮಿತಿ ರಚನೆಯಾಗಬೇಕಿದೆ. ಇಂತಹ ಕ್ರಮಗಳಿಂದ ಪರಿಣಾಮಕಾರಿಯಾಗಿ ನಿಗಾ ವಹಿಸಲು ಸಾಧ್ಯವಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಗಮನಕ್ಕೆ ತಂದರು.

ತಕ್ಷಣವೇ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಥರ್ಮಲ್ ಡ್ರೋನ್ ಖರೀದಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಪ್ರತ್ಯೇಕ ಚಿರತೆ ಟಾಸ್ಕ್ ಪೋರ್ಸ್ ಸಮಿತಿ ರಚನೆಗೆ ಕೂಡಲೇ ಪ್ರಸ್ತಾವನೆ ಸಲ್ಲಿಸಲು ನಿರ್ದೇಶನ ನೀಡಿದರು.

ಕಾಡುಪ್ರಾಣಿಗಳಿಂದ ಆಗಿರುವ ಬೆಳೆಹಾನಿ ಹಾಗೂ ಇನ್ನಿತರ ನಷ್ಟಗಳಿಗೆ ಇದುವರೆಗೆ ನೀಡಲಾಗಿರುವ ಪರಿಹಾರದ ಬಗ್ಗೆ ಮಾಹಿತಿ ಪಡೆದ ಸಚಿವರು, ಕಾಡಂಚಿನ ಗ್ರಾಮಗಳ ಜನರಿಗೆ ಒದಗಿಸಬೇಕಿರುವ ಸೌಲಭ್ಯಗಳಿಗೆ ವಿಳಂಬ ಮಾಡಬಾರದು. ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮಗಳಿಗೆ ಅರಣ್ಯ ಅಧಿಕಾರಿಗಳು ಹೆಚ್ಚು ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಜನರಿಗೆ ಧೈರ್ಯ ತುಂಬಬೇಕು. ಜಾಗೃತಿ ಮೂಡಿಸಬೇಕು. ಪ್ರಾಣಿಗಳು ಜನವಸತಿ, ಜಮೀನುಗಳಿಗೆ ಬರದಂತೆ ನೋಡಿಕೊಳ್ಳಲು ಕಣ್ಗಾವಲು ಇರಬೇಕು ಎಂದು ತಿಳಿಸಿದರು.

ಕುಡಿಯುವ ನೀರಿಗೆ ಎಲ್ಲಿಯೂ ಕೊರತೆಯಾಗಬಾರದು. ಅರಣ್ಯ ಪ್ರದೇಶಗಳಲ್ಲಿ ಇರುವ ಜನರಿಗೆ ಮೂಲ ಸೌಕರ್ಯಗಳಿಗೆ ಯಾವುದೇ ಅಡ್ಡಿ ಮಾಡಬಾರದು. ನೀರು, ವಿದ್ಯುತ್ ನಂತಹ ಅಗತ್ಯ ಅವಶಕತೆಗಳನ್ನು ಒದಗಿಸಬೇಕು. ಈಗಾಗಲೇ ಆರಂಭವಾಗಿರುವ ಕಾಮಗಾರಿಗೆ ಯಾವುದೇ ತಡೆ ನೀಡದೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅವರು ಸೂಚನೆ ನೀಡಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಕಾಡಿಗೆ ಸಮೀಪದ ಗ್ರಾಮೀಣ ಪ್ರದೇಶಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಇತ್ತೀಚೆಗೆ ಹೆಚ್ಚು ವರದಿಯಾಗುತ್ತಿದೆ. ಯಾವುದೇ ಭಾಗದಲ್ಲಿ ಸಮಸ್ಯೆ ಬಂದರೆ ಕೂಡಲೇ ಅಧಿಕಾರಿಗಳು ಧಾವಿಸಬೇಕು. ವಿದ್ಯುತ್, ಕುಡಿಯುವ ನೀರು ಕಾಮಗಾರಿಗೆ ವಿಳಂಬ ಧೋರಣೆ ಅನುಸರಿಸಬಾರದು ಎಂದರು.

ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿ, ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯಲ್ಲಿ ಹೆಚ್ಚು ಮೊತ್ತದ ಕುಡಿಯುವ ನೀರಿನ ಯೋಜನೆಗೆ ತಡೆ ನೀಡಲಾಗಿದೆ. ಜನರಿಗೆ ನೀರು ಒದಗಿಸುವ ಯೋಜನೆಯ ಅನುದಾನ ಬಳಕೆಯಾಗದಿದ್ದರೆ ಹೇಗೆ? ಆಕ್ಷೇಪಣೆಗಳಿದ್ದರೆ ಆರಂಭದಲ್ಲಿಯೇ ಅರಣ್ಯ ಇಲಾಖೆ ತಿಳಿಸಬೇಕಿತ್ತು. ಪ್ರಸ್ತುತ ಯೋಜನೆಗೆ ಇರುವ ತೊಡಕುಗಳನ್ನು ನಿವಾರಿಸಿ ಕುಡಿಯುವ ನೀರಿನ ಯೋಜನೆ ಕಾರ್ಯಗತಗೊಳಿಸಿ ಎಂದರು.

ಅರಣ್ಯ, ಕಂದಾಯ ಅಧಿಕಾರಿಗಳು ನಡೆಸಬೇಕಾದ ಜಂಟಿ ಸರ್ವೆ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಕಾವೇರಿ ವನ್ಯಜೀವಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಸುರೇಂದ್ರ, ಇನ್ನಿತರ ವಿಭಾಗದ ಅರಣ್ಯ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ