ಯೋಜನೆಗಳ ಸೌಲಭ್ಯ ಒದಗಿಸಲು ಕ್ರಮ ವಹಿಸಿ

KannadaprabhaNewsNetwork |  
Published : Nov 29, 2024, 01:04 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು

ಗದಗ: ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇಲಾಖೆಯಿಂದ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಹೆಚ್ಚಿನ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಹಾಗೂ ಫೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಭರತ್.ಎಸ್ ಮಾತನಾಡಿ, ಜಿಲ್ಲೆಯ ಎಲ್ಲ ಶಾಲೆಗಳ ಆವರಣದಲ್ಲಿ ಮಕ್ಕಳಿಗೆ ಸುಲಭವಾಗಿ ಕಾಣುವ ಹಾಗೇ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸುವ ಕೆಲಸವಾಗಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕುರಿತು ಇನ್ನೂ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ.ಜಿ ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಯ ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ11, ಅಂಗನವಾಡಿ ಕೇಂದ್ರದಲ್ಲಿ 5, ಜಿಮ್ಸ್ ಆಸ್ಪತ್ರೆ ಹಾಗೂ ಸಂಘ ಸಂಸ್ಥೆಗಳಲ್ಲಿ 13 ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯ ತಡೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ತಡೆ ಯೋಜನೆಯಡಿ ತಾಲೂಕು ಮಟ್ಟದಲ್ಲಿ 5 ಸಭೆ ಹಾಗೂ ಗ್ರಾಪಂ ಮಟ್ಟದಲ್ಲಿ122 ಸಭೆಗಳನ್ನು ಆಯೋಜಿಸಿ ಅರಿವು ಮೂಡಿಸಲಾಗಿದೆ. ಜುಲೈ 2024 ರಿಂದ ಸೆ. 2024ರ ವರೆಗೆ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಒಟ್ಟು 23 ಪ್ರಕರಣ ಇತ್ಯರ್ಥಗೊಳಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಸ್ವಾಧಾರ ಗೃಹ ಯೋಜನೆ, ಉಜ್ವಲ ಯೋಜನೆ, ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ, ಸ್ವೀಕಾರ ಕೇಂದ್ರ, ಬಾಲಕಿಯರ ವಸತಿನಿಲಯ ಯೋಜನೆ, ವಿಧವಾ ಕೋಶ, ಪೋಷಣ ಅಭಿಯಾನ ಕುರಿತು ಚರ್ಚಿಸಲಾಯಿತು.

ಈ ವೇಳೆ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೀನಾಕ್ಷಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!