ಕೊಪ್ಪಳ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬಹುತೇಕ ಎಲ್ಲ ತಾಲೂಕುಗಳಲ್ಲಿ ಶೇ. 80 ರಷ್ಟು ಬೆಳೆ ಹಾನಿ ಸಂಭವಿಸಿದೆ. ಇದರಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ವಿಮಾ ಕಂಪನಿಗಳು ಶೇ. 25 ರಷ್ಟು ಮಧ್ಯಂತರ ಬೆಳೆ ವಿಮೆ ಪರಿಹಾರ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಿ ಅಗತ್ಯ ಕ್ರಮ ವಹಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಕುರಿತು ಖುದ್ದು ಪರಿಶೀಲನೆ ಮಾಡಿದ್ದೇನೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬಹುತೇಕ ಶೇ. 80 ಕ್ಕೂ ಹೆಚ್ಚು ಬೆಳೆ ಹಾನಿ ಸಂಭವಿಸಿದೆ. ಮುಂಗಾರು ಮಳೆ ಕೊರತೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿದ ಬಹುತೇಕ ಬೆಳೆಗಳು ನಾಶವಾಗಿವೆ. ಆದ್ದರಿಂದ ಈಗಾಗಲೇ ಬೆಳೆ ವಿಮೆಗೆ ನೋಂದಾಯಿಸಿದ ರೈತರಿಗೆ ಒಟ್ಟು ಬೆಳೆ ವಿಮೆಯ ಶೇ.25 ರಷ್ಟನ್ನು ಮಧ್ಯಂತರ ಪರಿಹಾರವಾಗಿ ವಿಮಾ ಕಂಪನಿಗಳು ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಮಳೆಯಾಧಾರಿತ ಬೆಳೆಗಳು ಹಾನಿಯಾದ ಹಿನ್ನೆಲೆ ರೈತರಿಗೆ ಬದಲಾದ ಹವಾಮಾನಕ್ಕೆ ಅನುಗುಣವಾಗಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಬಗ್ಗೆ ಅರಿವು ಮೂಡಿಸಿ. ಬೆಳೆ ವಿಮೆಗೆ ನೋಂದಣಿ ಮಾಡಲು ಅವಧಿ ವಿಸ್ತರಣೆಗೆ ಅವಕಾಶವಿದ್ದಲ್ಲಿ ಆ ಬಗ್ಗೆ ಕ್ರಮ ವಹಿಸಿ. ಎಲ್ಲ ತಾಲೂಕುಗಳ ತಹಸೀಲ್ದಾರರು, ಕಾರ್ಯ ನಿರ್ವಾಹಕ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿ, ಪಿಡಿಒ ಸೇರಿದಂತೆ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ವಿಮಾ ಕಂಪನಿಗಳು ಅನಗತ್ಯ ಕಾರಣ ನೀಡಿ ವಿಮೆ ಪರಿಹಾರ ತಿರಸ್ಕರಿಸುವಂತಿಲ್ಲ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಳೆ ಕೊರತೆಯು ಕೇವಲ ರೈತರಿಗೆ ಮಾತ್ರವಲ್ಲ ಜಾನುವಾರುಗಳಿಗೂ ಸಂಕಷ್ಟ ತಂದಿದೆ. ಆದ್ದರಿಂದ ಜಿಲ್ಲೆಯಲ್ಲಿ ಮೇವು ಕೊರತೆಯಾಗದಂತೆ ಕ್ರಮ ವಹಿಸಬೇಕು. ಅಗತ್ಯವಿದ್ದಲ್ಲಿ ರೈತರಿಗೆ ಮೇವಿನ ಕಿಟ್,ಮೇವು ಬ್ಯಾಂಕ್ ಸ್ಥಾಪಿಸಬೇಕು. ಕೃಷಿ ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿರುವ ರೈತರಿಗೆ, ಗ್ರಾಮೀಣರಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಾಳೆಯಿಂದಲೇ ಪ್ರತಿ ತಾಲೂಕಿನಲ್ಲೂ ಮಾನವ ದಿನ ಸೃಜಿಸಿ ಉದ್ಯೋಗ ನೀಡಬೇಕು. ಸಮುದಾಯಿಕ ಹಾಗೂ ವೈಯಕ್ತಿಕ ಕಾಮಗಾರಿ, ಅಭಿವೃದ್ಧಿ ಕಾಮಗಾರಿಗಳಿಗೆ ಮಾನವ ದಿನ ಸೃಜಿಸಿ ರೈತರಿಗೆ ಉದ್ಯೋಗ ಒದಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೇವಲ 5 ಗಂಟೆಗಳು ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ರೈತರು ದೂರು ನೀಡಿದ್ದು, ಜೆಸ್ಕಾಂ ನಿಂದ ಅಗತ್ಯವಿರುವ ಎಲ್ಲ ಕಡೆ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯ ಹೇಮಲತಾ ನಾಯಕ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.