ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ

KannadaprabhaNewsNetwork |  
Published : Jul 04, 2024, 01:11 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ವೆಂಕಟೇಶ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಶುದ್ಧ ಕುಡಿವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಜು.8 ಮತ್ತು 9ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ಸಿಎಂ ಸಭೆ ನಡೆಸುತ್ತಿರುವ ಹಿನ್ನಲೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ಶುದ್ಧ ಕುಡಿವ ನೀರು ಪೂರೈಕೆ ಮಾಡುವುದು ಮೊದಲ ಆದ್ಯತೆಯಾಗಿದೆ. ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ಸರಿಪಡಿಸಿ, ಕಾರ್ಯಾರಂಭ ಮಾಡುವಂತೆ ಕ್ರಮವಹಿಸಬೇಕು. ಕುಡಿವ ನೀರಿನ ವಿತರಣೆ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದರೂ ಬಗೆಹರಿಸುವಂತೆ ನಿರ್ದೇಶನ ನೀಡಿದರು.

ಪ್ರಸಕ್ತ ವರ್ಷದಲ್ಲಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡ ನೀರಿನ ಮಾದರಿ ಪರೀಕ್ಷೆಘಲ ವರದಿ ಸಲ್ಲಿಸಬೇಕು.

ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ, ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕವಾಡಿಗರಹಟ್ಟಿಯಲ್ಲಿ ಸಂಭವಿಸಿದ ಕಲುಷಿತ ನೀರು ಸೇವನೆ ಪ್ರಕರಣದಂತಹ ಘಟನೆಗಳು ಮರುಕಳಿಸುವಂತಾಗಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ನವರಿಗೆ ಸರ್ಕಾರದಿಂದ ವೈದ್ಯಕೀಯ ವೆಚ್ಚ ಭರಿಸುವ ಸೌಲಭ್ಯವಿದ್ದು, ಜಿಲ್ಲೆಯಲ್ಲಿ ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣು ಪ್ರಸಾದ್ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದು, ಸಿಎಸ್‍ಸಿ ಹಾಗೂ ನಾಡಕಚೇರಿಗಳಲ್ಲಿಯೂ ಎಬಿಎಆರ್‌ಕೆ ಕಾರ್ಡ್ ನೋಂದಣಿಗೆ ಕ್ರಮವಹಿಸುವಂತೆ ತಾಕೀತು ಮಾಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಎಬಿಎಆರ್‌ಕೆ ಯೋಜನೆಯಡಿ ಜಿಲ್ಲೆಯಲ್ಲಿ 14.97 ಲಕ್ಷ ಗುರಿ ನಿಗಧಿಪಡಿಸಲಾಗಿದ್ದು, ಇದುವರೆಗೂ 5.94 ಲಕ್ಷ ನೋಂದಣಿಯಾಗಿ, ಶೇ.40 ರಷ್ಟು ಪ್ರಗತಿ ಸಾಧಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯು ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಬೇಕು. ಶಿಕ್ಷಕರಿಗೆ ವಿಷಯಾವಾರು ಪುನಶ್ಚೇತನ ಕಾರ್ಯಾಗಾರಗಳನ್ನು ಏರ್ಪಡಿಸಿ, ಎಸ್‍ಎಸ್‍ಎಲ್‍ಸಿ ಹಾಗೂ ಪಿಯು ಫಲಿತಾಂಶ ಹೆಚ್ಚಳ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನ ಮಾಡಬೇಕು. ಈ ಸಂಬಂಧ ಎದುರಾಗುವ ಇ-ಕೆವೈಸಿ ಸೇರಿದಂತೆ ಇನ್ನಿತರೆ ಕೆಲವು ತಾಂತ್ರಿಕ ದೋಷಗಳನ್ನು ಶೀಘ್ರದಲ್ಲಿ ಪರಿಹರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?