ಹಾಸ್ಟೆಲ್‌ಗಳಲ್ಲಿ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸಿ

KannadaprabhaNewsNetwork |  
Published : Jan 17, 2025, 12:47 AM IST
ವಸತಿನಿಲಯಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಸತಿನಿಲಯಗಳ ವಾರ್ಡನ್, ಮೇಲ್ವಿಚಾರಕರು, ಪ್ರಾಂಶುಪಾಲರ ಸಭೆಯಲ್ಲಿ ಡಿಸಿ ಲಕ್ಷ್ಮೀಪ್ರಿಯಾ ಮಾತನಾಡಿದರು. | Kannada Prabha

ಸಾರಾಂಶ

ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು

ಕಾರವಾರ: ಜಿಲ್ಲೆಯ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ವಾರ್ಡನ್‌ಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಸತಿನಿಲಯಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಸತಿನಿಲಯಗಳ ವಾರ್ಡನ್ ಮತ್ತು ಮೇಲ್ವಿಚಾರಕರು, ವಸತಿಶಾಲೆಗಳ ಪ್ರಾಂಶುಪಾಲರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ರಕ್ಷಣೆ, ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಲಭ್ಯಗಳ ಕೊರತೆಯಾಗದಂತೆ ಮುನ್ನೆಚರಿಕೆ ವಹಿಸುವಂತೆ ಸೂಚಿಸಿದ ಅವರು, ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸರ್ವತೋಮುಖ ಅಭಿವೃದ್ಧಿ ಅಗತ್ಯವಿರುವ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಅವುಗಳನ್ನು ಅನುಷ್ಠಾನಗೊಳಿಸಬೇಕು.

ಜಿಲ್ಲೆಯ ಹಾಸ್ಟೆಲ್‌ಗಳಲ್ಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗುವಂತೆ ಅವರ ವಿದ್ಯಾಭ್ಯಾಸದ ಕುರಿತು ವಾರ್ಡನ್‌ಗಳು ವಿಶೇಷ ಕಾಳಜಿ ವಹಿಸಬೇಕು. ಅವರ ಕಲಿಕೆಗೆ ಅಗತ್ಯವಿರುವ ಪುಸ್ತಕಗಳು ಮತ್ತು ಕಂಪ್ಯೂಟರ್ ವ್ಯವಸ್ಥೆಯನ್ನು ಒದಗಿಸಬೇಕು. ಯಾವುದೇ ವಿದ್ಯಾರ್ಥಿ ಕನಿಷ್ಠ ಶೇ. 60ಕ್ಕಿಂತ ಕಡಿಮೆ ಅಂಕ ಪಡೆಯದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ನ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂಥ ಪುಸ್ತಕಗಳನ್ನು ಒದಗಿಸುವುದರ ಜತೆಗೆ ಉನ್ನತ ಸಾಧನೆಗಳನ್ನು ಮಾಡುವ ಕುರಿತು ಅವರಿಗೆ ಸದಾ ಪ್ರೇರೇಪಿಸಿ, ಅವರಲ್ಲಿ ಧನಾತ್ಮಕ ಚಿಂತನೆಗಳು ರೂಪುಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿರುವ ಸುರಕ್ಷತೆ ಕುರಿತ ಸೇಫ್ಟಿ ಆಡಿಟ್ ನಡೆಸಿ, ಅಲ್ಲಿ ಕಂಡುಬರುವ ಕೊರತೆಗಳ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಆದ್ಯತೆಯ ಮೇಲೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಅಸುರಕ್ಷತೆಯ ಕಾರಣದಿಂದ ಯಾವುದೇ ಅವಘಡಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ಮತ್ತು ಆರೋಗ್ಯದ ಕುರಿತಂತೆ ವಾರ್ಡನ್‌ಗಳು ತಮ್ಮ ಮನೆಯ ಮಕ್ಕಳಂತೆ ಕಾಳಜಿ ವಹಿಸಬೇಕು.ಅವರೊಂದಿಗೆ ಮುಕ್ತವಾಗಿ ಬೆರೆತು ಅವರಲ್ಲಿರುವ ಕೊರತೆಗಳು ಮತ್ತು ಸಮಸ್ಯೆಗಳನ್ನು ಬಗ್ಗೆ ತಿಳಿದು ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಮಾತನಾಡಿ, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿಸುವ ಸೌಲಭ್ಯಗಳಲ್ಲಿ ನಿರ್ಲಕ್ಷ್ಮ ವಹಿಸಬಾರದು. ಕಲುಷಿತ ನೀರು ಸರಬರಾಜು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿರಂತರವಾಗಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ಕಲಿಕೆಯ ಜತೆಗೆ ಅವರಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಎಲ್ಲ ಹಾಸ್ಟೆಲ್‌ಗಳಲ್ಲಿ ಪ್ರತಿ ತಿಂಗಳು ಪ್ರಚಲಿತ ಮತ್ತು ಗಮನಾರ್ಹ ವಿಷಯಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ ಅವರ ಸಮಗ್ರ ಮನೋವಿಕಾಸಕ್ಕೆ ಒತ್ತು ನೀಡಬೇಕು ಎಂದರು.ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸತೀಶ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಬ್ದಲ್ ರಶೀದ್ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ