ಬೆಳೆಹಾನಿ ಪರಿಹಾರಕ್ಕೆ ಶೀಘ್ರ ಕ್ರಮಕೈಗೊಳ್ಳಿ

KannadaprabhaNewsNetwork |  
Published : Nov 18, 2025, 02:15 AM IST
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಬೆಳೆಗಳ ಪರಿಹಾರ ವಿತರಣೆಗೆ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಸಹಕಾರ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಬೆಳೆಗಳ ಪರಿಹಾರ ವಿತರಣೆಗೆ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಸಹಕಾರ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಲ್‌ ಜೀವನ ಮಿಷನ್‌ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಶುದ್ಧ

ಕುಡಿಯುವ ನೀರಿನ ಘಟಕಗಳನ್ನು ನಿಯಮಿತವಾಗಿ ನಿರ್ವಹಣೆ ಮಾಡಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಇಲಾಖೆಗಳ ವಿವಿಧ ಕಾಮಗಾರಿಗೆ ಬಿಡುಗಡೆಯಾದ ಹಣ ಬಳಕೆಯಾಗದೆ ಬಾಕಿ ಉಳಿದಿದ್ದು, ಅದನ್ನು ಕೊರತೆ ಇರುವ ಕಾಮಗಾರಿಗಳಿಗೆ

ಬಳಸಿಕೊಂಡು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು. ಸಂಪೂರ್ಣ ಅನುದಾನವನ್ನು ಬಳಕೆ ಮಾಡಿಕೊಂಡಲ್ಲಿ ಮಾತ್ರ ಗರಿಷ್ಠ

ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯ. ಕೆಲವು ಕಾಮಗಾರಿಗಳಿಗೆ ಭೂ ಸ್ವಾದೀನ, ಕಳಪೆ ಕಟ್ಟಡ, ಸಾಮಾಜಿಕ ಸಮಸ್ಯೆ ಸೇರಿ ನಾನಾ ಅಡೆತಡೆಗಳಿದ್ದು, ಅವುಗಳನ್ನು ಬಗೆಹರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. 31 ಎಂ.ಎಲ್.ಡಿ ಜಲಶುದ್ಧೀಕರಣ ಘಟಕ, ಮೇಲ್ಮಟ್ಟದ ಜಲ ಸಂಗ್ರಹಗಾರ, ಭೂಮಟ್ಟದ ಜಲ ಸಂಗ್ರಹಗಾರ ಕಾಮಗಾರಿಗಳು ಚಾಲನೆಯಲಿದ್ದು, ನಿಗದಿತ 2026ರ ಡಿಸೆಂಬರ್ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ತಾಲೂಕುಮಟ್ಟದಲ್ಲಿ ಸಭೆಗಳನ್ನು ಆಯೋಜಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಉಸ್ತವಾರಿ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು.329 ಸೊಸೈಟಿಗಳಿಂದ ಗೊಬ್ಬರ ವಿತರಣೆ

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, 2025-26 ಸಾಲಿನ ಬೀಜ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಈಗಾಗಲೇ ವಿತರಣೆ ಮಾಡಲಾಗಿದ್ದು, ಹಿಂಗಾರು ಬೇಸಿಗೆ ಹಂಗಾಮಿಗೆ ಬಿತ್ತನೆ ಬೀಜಗಳ 329 ಸೊಸೈಟಿಗಳ ಮೂಲಕ ರಸಗೊಬ್ಬರಗಳ ವಿತರಣೆ ಮಾಡಲಾಗುತ್ತಿದೆ. ಜೋಳ, ಮೆಕ್ಕೆಜೋಳ, ಗೋಧಿ, ಕಡಲೆ, ನೆಲಗಡಲೆ ಹಾಗೂ ಸೂರ್ಯಕಾಂತಿ ಬೆಳೆಗಳಿಗೆ ಸಹಾಯದನದಡಿ ಬೇಡಿಕೆಯಂತೆ ಬಿತ್ತನೆ ಬೀಜಗಳನ್ನು ಪೂರೈಸಲಾಗಿದೆ ಎಂದರು.

ರಾಮದುರ್ಗ, ಯರಗಟ್ಟಿ ತಾಲೂಕಿನಲ್ಲಿ ಬೆಳೆ ಹಾನಿಗಳಿಗೆ ಪರಿಹಾರ ಈಗಾಗಲೇ ಬಿಡುಗಡೆಯಾಗಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಗೆ ಎಲ್ಲ ರೈತರಿಗೆ ಸೂಚನೆ ನೀಡಿದ್ದು, ರೈತರಿಗೆ ವಿಮೆ ಕ್ಲೇಮ್ ಮಾಡಿ ಕೊಡುವ ಪ್ರಕ್ರಿಯೆ ನಡೆದಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದರು.

ರೈತರ ತರಕಾರಿ, ಹಣ್ಣುಗಳನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಸುಮಾರು 10 ಕೋಲ್ಡ್ ಸ್ಟೋರೇಜ್‌ಗಳಿವೆ. ಮೂಡಲಗಿ, ಗೋಕಾಕ, ರಾಯಬಾಗ ಭಾಗದಲ್ಲಿ ಅರಿಶಿಣ ಬೆಳೆ ಹೆಚ್ಚಾಗಿದ್ದು, ಮಾರಾಟಕ್ಕೆ ಅನುಕೂಲಕರ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅವರಿಗೆ ಸಲಹೆ ನೀಡಲಾಗುತ್ತಿದೆ ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ ಮಾತನಾಡಿ, ನಗರಾಭಿವೃದ್ಧಿ ಯೋಜನೆಯಡಿ ಅಗತ್ಯ ಕೆಲವು ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್‌ ಈಗಾಗಲೇ ಪ್ರಾರಂಭಿಸಲಾಗಿದೆ. ಅದರಂತೆ, ಪ್ರತಿ ಊಟಕ್ಕೆ ₹ 10 ಮತ್ತು ಬೆಳಗಿನ ಉಪಹಾರಕ್ಕೆ ₹ 5 ನಂತೆ ದರ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.

ಹಿಂದುಳಿದ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ 166 ವಸತಿ ನಿಲಯಗಳಿವೆ. 30 ಹೊಸ ವಸತಿ ನಿಲಯಗಳ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ.. ಸಮಾಜ ಕಲ್ಯಾಣ ಇಲಾಖೆಯ 66 ಮೆಟ್ರಿಕ್ ಪೂರ್ವ ಮತ್ತು 36 ಮೆಟ್ರಿಕ್ ನಂತರ ವಸತಿ ನಿಲಯಗಳು ಇವೆ. ವಸತಿ ನಿಲಯ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಗೆ ನಿವೇಶನ ಕೊರತೆ ಇಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಪಾಲಿಕೆ ಆಯುಕ್ತೆ ಶುಭ.ಬಿ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರುಶುರಾಮ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೊಳೇಕರ, ತೋಟಗಾರಿಕೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.ಕೋಟ್‌ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಹಾನಿಗೊಳಗಾದ ಕೃಷಿ ಪ್ರದೇಶದ ದಾಖಲೆಗಳನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು. ಈ ಕಾರ್ಯದಲ್ಲಿ ಎದುರಾಗುವ ತಾಂತ್ರಿಕ ತೊಂದರೆಗಳನ್ನು ತ್ವರಿತವಾಗಿ ನಿವಾರಿಸಿ ಹಿಂಗಾರು ಹಂಗಾಮಿಗೆ ಅಗತ್ಯ ರಸಗೊಬ್ಬರ ಪೂರೈಕೆಯಲ್ಲಿ ಯಾವುದು ತೊಂದರೆಗಳಾಗದಂತೆ ಎಚ್ಚರವಹಿಸಬೇಕು. ಯೂರಿಯಾ, ಡಿಎಪಿ ಸೇರಿ ಅಗತ್ಯ ದಾಸ್ತಾನುಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಬೇಕು. ರೈತರಿಗೆ ಯಾವುದೇ ಸಮಸ್ಯೆಗಳುಂಟಾದಲ್ಲಿ ತಕ್ಷಣ ಅಧಿಕಾರಿಗಳು ಸ್ಪಂದಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಬೇಕು.ಸಂಜಯ ಶೆಟ್ಟೆನ್ನವರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ