ಡೆಂಘೀ, ಕೀಟಜನ್ಯ ರೋಗ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

KannadaprabhaNewsNetwork | Published : Jun 21, 2024 1:05 AM

ಸಾರಾಂಶ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜರುಗಿದ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಕೀಟಜನ್ಯ ರೋಗ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗದಗ: ಈಗಾಗಲೇ ಮಳೆಗಾಲ ಆರಂಭವಾಗಿರುವುದಿಂದ ವಿವಿಧೆಡೆ ನಿಂತ ನೀರಿನಿಂದ ಡೆಂಘೀ, ಚಿಕೂನ್‌ಗುನ್ಯಾ ಹಾಗೂ ಇತರ ಕೀಟಜನ್ಯ ರೋಗಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತವೆ. ಈ ನಿಟ್ಟಿನಲ್ಲಿ ಇಂತಹ ರೋಗಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜರುಗಿದ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರೋಗ್ಯ ಇಲಾಖೆಯವರು ಡೆಂಘೀ ಹಾಗೂ ಕೀಟಜನ್ಯ ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆಯ ಕುರಿತು, ಸ್ವಯಂ ರಕ್ಷಣಾ ವಿಧಾನಗಳನ್ನು ಬಳಸುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಸಂಬಂಧಿಸಿದಂತೆ 2024ರ ಮೇ ವರೆಗೆ 703 ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದಾಗ 36 ಡೆಂಘೀ ಪ್ರಕರಣಗಳು ಖಚಿತಪಟ್ಟಿವೆ. ಚಿಕೂನ್‌ ಗುನ್ಯಾಕ್ಕೆ ಸಂಬಂಧಿಸಿದಂತೆ 2024ರ ಮೇ ವರೆಗೆ 98 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, 7 ಪ್ರಕರಣಗಳು ಖಚಿತಪಟ್ಟಿವೆ ಹಾಗೂ ಮಲೇರಿಯಾ ರೋಗಕ್ಕೆ ಸಂಬಂಧಿಸಿದಂತೆ 1,50,169 ಜನರ ರಕ್ತಲೇಪನ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 1 ಮಲೇರಿಯಾ ಪ್ರಕರಣ ಖಚಿತಪಟ್ಟಿವೆ. ಜಿಲ್ಲೆಯ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ ನಿಯೋಜಿಸಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಡೆಂಘೀ ಮತ್ತು ಚಿಕೂನ್‌ಗುನ್ಯಾ ರೋಗಗಳು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್‍ಗಳು, ಡ್ರಮ್‍ಗಳು, ಹೂವಿನಕುಂಡ ಮುಂತಾದವುಗಳಲ್ಲದೇ ಮನೆ ಸುತ್ತಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್‍ ಕಪ್‍ಗಳು, ಟೈರ್‌ಗಳು, ಎಳೆನೀರಿನ ಚಿಪ್ಪು ಮತ್ತು ಇತರ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಈ ಕುರಿತಂತೆ ಗ್ರಾಮಗಳಲ್ಲಿ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಂದ ಆರೋಗ್ಯ ಶಿಕ್ಷಣ ನೀಡಲಾಗಿದೆ ಎಂದು ವಿವರಿಸಿದರು.

ಜಿಪಂ ಸಿಇಒ ಭರತ್ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಅರುಂಧತಿ ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Share this article