ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ವಹಿಸಿ: ಶ್ರೀಧರ್

KannadaprabhaNewsNetwork |  
Published : Oct 09, 2026, 02:15 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ವಿವಿಧ ಅಧಿಕಾರಿಗಳ ಸಮನ್ವಯದೊಂದಿಗೆ ಎದುರಿಸಬೇಕು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ವಿವಿಧ ಅಧಿಕಾರಿಗಳ ಸಮನ್ವಯದೊಂದಿಗೆ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಹಿಂಗಾರು ಹಂಗಾಮಿನಲ್ಲಿ ಗ್ರಾಮೀಣ, ನಗರ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಯ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕವಾರು ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ತಯಾರಿಸಿ ಸಲ್ಲಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮವಹಿಸಬೇಕು. ಜಲಾಶಯಗಳಿಂದ ನೀರು ಬಿಡುವ ಮುನ್ನ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕೆಂದು ನಿರ್ದೇಶನ ನೀಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜನ ಮತ್ತು ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರು ಹಾಗೂ ಅಗತ್ಯ ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಜಲ ಜೀವನ್ ಮಿಷನ್ (JJM) ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಜೆಜೆಎಂ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಿ ಪ್ರತಿಯೊಂದು ಮನೆಗೆ ನಲ್ಲಿ ನೀರು ತಲುಪಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವೇಶನ ನೀಡಲು ಭೂಮಿ ಲಭ್ಯತೆ ಕುರಿತು ತಹಸೀಲ್ದಾರ್ ಹಾಗೂ ಇಒಗಳು ನೀಡಿದ ವರದಿಗಳನ್ನು ಪರಿಶೀಲಿಸಿ, ಸೂಕ್ತ ಭೂ ಸುಧಾರಣೆ ಹಾಗೂ ಲೆವೆಲಿಂಗ್ ಮಾಡಿ ನಿವೇಶನ ಜಾಗ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಪಂ ವ್ಯಾಪ್ತಿಯ ಕೆರೆಗಳಲ್ಲಿ ಪ್ರಸ್ತುತ ಸಂಗ್ರಹವಾಗಿರುವ ನೀರಿನ ಪ್ರಮಾಣ ಹಾಗೂ ಜಿಲ್ಲೆಯ ಅಂತರ್ಜಲ ಮಟ್ಟದ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ನೀರನ್ನು ಸಮರ್ಪಕವಾಗಿ ಬಳಕೆ ಮಾಡಲು ಸೂಚಿಸಿದರು. ಅಲ್ಲದೆ ಕೆರೆಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ತಪಾಸಣೆ ಮಾಡಲು ನಿರ್ದೇಶಿಸಿದರು. ತೋಟಗಾರಿಕೆ ಇಲಾಖೆ ಕಾರ್ಯಕ್ರಮಗಳು ಹಾಗೂ ವಿಬಿಜಿ-ರಾಮ್ ಜಿ ಯೋಜನೆಯ ಪ್ರಗತಿ ವಿವರಗಳನ್ನು ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ಗುರಿ ತಲುಪಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ, ತಾಲೂಕುವಾರು ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ವಿಬಿಜಿ-ರಾಮ್‌ಜಿ ಕಾಮಗಾರಿಗಳ ಪ್ರಗತಿಯನ್ನು ವಿವರಿಸಿ, ಜಲಮೂಲಗಳ ಪುನಶ್ಚೇತನ ಹಾಗೂ ಕೆರೆ ಹೂಳೆತ್ತುವ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.

ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಹಾಗೂ ಇಒಗಳ ಸಮನ್ವಯದೊಂದಿಗೆ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಭೂಮಿ ಗುರುತಿಸುವ ಹಾಗೂ ಸರ್ವೇ ಮಾಡುವ ಪ್ರಕ್ರಿಯೆ ಚುರುಕಿನಿಂದ ನಡೆಯುತ್ತಿದೆ ಎಂದು ಸಭೆಯಲ್ಲಿ ವಿವರಿಸಿದರು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಜೋಳದ ಕೊಯ್ಲು ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ರೈತರಿಗೆ ಸೂಕ್ತ ಮಾಹಿತಿ ಹಾಗೂ ಬೆಂಬಲ ನೀಡಲಾಗುತ್ತಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದರೂ, ಅಕ್ಟೋಬರ್‌ನಲ್ಲಿ ಮಳೆಯ ಪ್ರಮಾಣ ಚೇತರಿಸಿಕೊಂಡು ಶೇ.90ರಷ್ಟು ಪ್ರಗತಿ ಕಂಡಿದೆ ಎಂದರು.

ಜಂಟಿ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಶೇ.99ರಷ್ಟು ಸಾಧನೆಯಾಗಿದ್ದು, ಮಿಸ್‌ಮ್ಯಾಚ್ ಪ್ರಕರಣಗಳು ಹಾಗೂ ಬೆಳೆ ಹಾನಿ ಸಮೀಕ್ಷೆಯನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸಿ ಅರ್ಹ ರೈತರಿಗೆ ಪರಿಹಾರ ದೊರಕಿಸಲು ಕ್ರಮವಹಿಸಲಾಗುತ್ತಿದೆ. ಪಿಎಂ ಕಿಸಾನ್ ಯೋಜನೆಯಡಿ ಉಳಿದಿರುವ ಅರ್ಹ ರೈತರು ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪ ವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು ಸೇರಿ ತಹಸೀಲ್ದಾರರು, ಕಾರ್ಯನಿರ್ವಾಹಣಾ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಕ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುರಿನಕಟ್ಟೆ ಪ್ರಕರಣದಲ್ಲಿ ಪೊಲೀಸರ ದ್ವಂದ್ವ ನೀತಿಗೆ ಮಾಜಿ ಸಚಿವ ಶಿವಾನಂದ ನಾಯ್ಕ ಆಕ್ಷೇಪ
ಕುಷ್ಟಗಿ ಬಿಇಒ ಕಚೇರಿಯಲ್ಲಿ ₹74 ಲಕ್ಷದ ಅಕ್ರಮದ ಆರೋಪ