ಕುರುಗೋಡು: ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ತಹಸೀಲ್ದಾರ್ ಯು. ನಾಗರಾಜ ಸೂಚಿಸಿದರು.
ತಾಪಂ ಇಒ ಪಂಪಾಪತಿ ಹಿರೇಮಠ ಮಾತನಾಡಿ, ಅಗತ್ಯಬಿದ್ದರೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಗುರುತಿಸಿಕೊಳ್ಳಿ. ನೀರಿನ ಗುಣಮಟ್ಟ ಪರೀಕ್ಷಿಸಿ ಕುಡಿಯಲು ಯೋಗ್ಯವಿದೆ ಎಂದು ದೃಢಪಟ್ಟ ನಂತರ ಸರಬರಾಜು ಮಾಡಬೇಕು. ಇಲ್ಲವಾದರೆ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕುಡಿಯುವ ನೀರು ಸರಬರಾಜು ಪೈಪ್‌ಗೆ ಚರಂಡಿ ನೀರು ಸೇರಿದರೆ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ಬಗ್ಗೆ ಎಲ್ಲ ಪಿಡಿಒಗಳು ತೀವ್ರ ನಿಗಾವಹಿಸಬೇಕು ಎಂದು ಸೂಚಿಸಿದರು.ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರಾಮಚಂದ್ರ, ತಾಲೂಕಿನಲ್ಲಿರುವ ಬಹುತೇಕ ಕೆರೆಗಳನ್ನು ಭರ್ತಿ ಮಾಡಲಾಗಿದೆ. ಕಾಲುವೆಯಲ್ಲಿ ನೀರು ಇರುವ ವರೆಗೆ ನಿತ್ಯ ನೀರು ಪೂರೈಕೆ ಮಾಡಲಿ. ನಂತರ ನೀರಿನ ಲಭ್ಯತೆ ಆಧಾರದ ಮೇಲೆ ವಾರಕ್ಕೆ ಎರಡು ಬಾರಿ ಸರಬರಾಜು ಮಾಡಬಹುದು ಎಂದರು.
ತಾಲೂಕಿನ ರೈತರು ಭತ್ತದ ಹುಲ್ಲನ್ನು ಯಾವುದೇ ಕಾರಣಕ್ಕೂ ನೆರೆಯ ತಾಲೂಕು, ಜಿಲ್ಲೆಗಳಿಗೆ ಮಾರಾಟ ಮಾಡಬಾರದು. ಈ ಬಗ್ಗೆ ಕೃಷಿ ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ತಹಸೀಲ್ದಾರ್ ಸೂಚಿಸಿದರು.