ರಾಮನಗರ: ಪ್ರಸಕ್ತ ವರ್ಷ ಬೇಸಿಗೆ ತೀವ್ರವಾಗಿರುವುದರಿಂದ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುವ ಸಂಭವವಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ವಹಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಸ್ತುತ ಜಿಲ್ಲೆಯ 33 ಗ್ರಾಮ ಪಂಚಾಯಿತಿಗಳ 52 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಜ್ಞಾನಮೂರ್ತಿ ಸಭೆಯಲ್ಲಿ ತಿಳಿಸಿದರು.
ಶಾಸಕರು ಮಾತನಾಡಿ, ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಜಿಲ್ಲೆಯಲ್ಲಿ ಅವಶ್ಯವಿರುವ ಕಡೆ ಬೋರ್‌ವೆಲ್‌ಗಳು ಕೊರೆಯಲು ಅನುಮತಿ ನೀಡಬೇಕು. 15ನೇ ಹಣಕಾಸು ಯೋಜನೆಯಡಿ ಯಾವುದೇ ಅನುದಾನ ಬಿಡುಗಡೆ ಆಗದಿರುವುದರಿಂದ ಜಿಲ್ಲೆಯ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಜಿಲ್ಲಾ ವಿಪತ್ತು ನಿಧಿ ಅನುದಾನವನ್ನು ಬಳಸುವಂತೆ ಸಚಿವರಲ್ಲಿ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿರವರು, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜಿಲ್ಲಾ ಮಟ್ಟದ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತ ಕ್ರಮ ವಹಿಸುವಂತೆ ಸೂಚಿಸಿದರು.
ಶಾಸಕ ಬಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ದರ್ಖಾಸ್ತು ಪೋಡಿ ಆಂದೋಲನ, ಪೌತಿ ಖಾತೆ ಆಂದೋಲನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯುವಾಗ ಸಾರ್ವಜನಿಕರಿಗೆ, ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರೆ ಇದರಿಂದ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ಜಮೀನಿನ ಪೋಡಿ, ಪಹಣಿ, ಇಂಡೀಕರಣ ಇನ್ನಿತರ ದಾಖಲೆಗಳಿಗೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ನೀಡಿದ ವರದಿಗೆ ತಹಶೀಲ್ದಾರರು ಯಾವುದೇ ಕ್ರಮ ಕೈಗೊಳ್ಳದಿರುವುದು ಜನರಿಗೆ ತೊಂದರೆ ಉಂಟು ಮಾಡುತ್ತಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರು ಜಿಲ್ಲೆಯ ಎಲ್ಲಾ 838 ಕಂದಾಯ ಗ್ರಾಮಗಳಿಗೂ ಸ್ಮಶಾನ ಭೂಮಿ ಇದೆ. ಹೆಚ್ಚು ಜನಸಂಖ್ಯೆ ಇದ್ದಲ್ಲಿ ಮತ್ತೊಂದು ಸ್ಮಶಾನ ಭೂಮಿ ಒದಗಿಸಲಾಗುವುದು ಎಂದು ಮಾಹಿತಿ ನೀಡಿದಾಗ ಸಚಿವರು, ಅವಶ್ಯವಿರುವ ಕಡೆ ಮತ್ತೊಂದು ಸ್ಮಶಾನ ಭೂಮಿಗೆ ಪ್ರಸ್ತಾವನೆ ಕಳುಹಿಸುವಂತೆ ತಿಳಿಸಿದರು.
ಪ್ರಸಕ್ತ ವರ್ಷ ಮುಂಗಾರು ಮಳೆಯು ವಾಡಿಕೆಗಿಂತ ಕಡಿಮೆಯಾಗುವ ಸಂಭವವಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ವಹಿಸಬೇಕು. ಕೃಷಿ ಭಾಗ್ಯ, ಕೃಷಿ ಸಿಂಚಾಯಿ, ಕೃಷಿ ಯಾಂತ್ರಿಕರಣ, ಕರ್ನಾಟಕ ರೈತ ¸ಮೃದ್ಧಿ ಯೋಜನೆ ಇನ್ನಿತರ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಜೇಷ್ಠತೆಗಳಿಗನುಗುಣವಾಗಿ ಆಯ್ಕೆ ಮಾಡಬೇಕು. ಜಿಲ್ಲೆಯ ಹೆಚ್ಚಿನ ರೈತರಿಗೆ ಕೃಷಿ ಇಲಾಖೆಯ ಸೌಲಭ್ಯ ದೊರಕಿಸಿಕೊಡಲು ಕೃಷಿ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕ ಯೋಗೇಶ್ವರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾಧ್ಯಕ್ಷ ಕೆ. ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಗಂಗಾಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಉಪಸ್ಥಿತರಿದ್ದರು.
ಜಿಲ್ಲೇಲಿ 46 ಕಿ.ಮೀ ಬ್ಯಾರಿಕೇಡ್ ನಿರ್ಮಾಣ
23ಕೆಆರ್ ಎಂಎನ್ 12.ಜೆಪಿಜಿ
ರಾಮನಗರದ ಜಿಪಂ ಸಭಾಂಗಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.