ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ

KannadaprabhaNewsNetwork |  
Published : Nov 15, 2026, 02:45 AM IST
ರಾಮದುರ್ಗ ತಾಲೂಕಾ ಪಂಚಾಯ್ತಿ ಸಭಾ ಭವನದಲ್ಲಿ ನಡೆದ ಗ್ರಾಪಂ ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳ ಸಭೆಯನ್ನು ಅಶೋಕ ಪಟ್ಟಣ ನಡೆಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಾಮದುರ್ಗಈ ವರ್ಷ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಆದ್ದರಿಂದ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪಿಡಿಒಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಸೂಚಿಸಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಈ ವರ್ಷ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಆದ್ದರಿಂದ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪಿಡಿಒಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಸೂಚಿಸಿದರು.

ಶನಿವಾರ ತಾಪಂ ಸಭಾಭವನದಲ್ಲಿ ತಾಲೂಕಿನ ಗ್ರಾಪಂಗಳ ಆಡಳಿತಾಧಿಕಾರಿಗಳು ಹಾಗೂ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಡಿಒಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರು ಮತ್ತು ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಗ್ಯಾರಂಟಿ ಯೋಜನೆಯಡಿ ಸೂಕ್ತ ದಾಖಲೆ ಹೊಂದಿರುವ ಆಸ್ತಿಗಳಿಗೆ ಇ-ಸ್ವತ್ತು ದಾಖಲಾತಿ ನೀಡುವ ನಿಯಮಗಳನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಲಾಗಿದೆ. ಆದ್ದರಿಂದ ಪಿಡಿಒಗಳು ವಿಳಂಬ ಮಾಡದೆ ಅರ್ಹ ಫಲಾನುಭವಿಗಳಿಗೆ ಇ-ಸ್ವತ್ತು ದಾಖಲಾತಿ ಒದಗಿಸಬೇಕು ಎಂದು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಾಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಇಜಾನ್ ಸುಬೂರ್, ತಾಲೂಕಿನಲ್ಲಿ ಒಟ್ಟು 81,242 ಆಸ್ತಿಗಳಿಗೆ ಇ-ಸ್ವತ್ತು ನೀಡಬೇಕಿದೆ. ಇವುಗಳಲ್ಲಿ 39,643 ಗ್ರಾಮಠಾಣಾ ಆಸ್ತಿಗಳು, ಸುಮಾರು 12 ಸಾವಿರ ಸ್ವಂತ ಆಸ್ತಿಗಳು, 3,079 ಹಕ್ಕುಪತ್ರ ನೀಡಿರುವ ಆಸ್ತಿಗಳು ಹಾಗೂ 633 ಭೂಪರಿವರ್ತನೆಗೊಂಡ ಆಸ್ತಿಗಳಿವೆ. ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ತಾಲೂಕಿನ ಬಹುತೇಕ ಎಲ್ಲ ಗ್ರಾಮಗಳ ಕಾಮಗಾರಿಗಳು ಪೂರ್ಣಗೊಂಡಿವೆ. ಹಳೆಯ ಪೈಪ್‌ಲೈನ್‌ಗಳ ಬದಲಿಗೆ ಜಲಜೀವನ್ ಮಿಷನ್ ಅಡಿ ಅಳವಡಿಸಿರುವ ಹೊಸ ಪೈಪ್‌ಗಳ ಮೂಲಕವೇ ನೀರು ಪೂರೈಸಬೇಕು. ಹಳೆಯ ಪೈಪ್‌ಗಳ ಮೂಲಕ ನೀರು ಹರಿಸುವುದರಿಂದ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ ಎಂದರು.

ಕಟಕೋಳ ಮತ್ತು ತುರನೂರ ರಸ್ತೆ ಅಗಲೀಕರಣ ಕಾಮಗಾರಿಗಳು ಪ್ರಾರಂಭವಾಗಿದ್ದು, ರಸ್ತೆ ಮಧ್ಯದಲ್ಲಿರುವ ಕುಡಿಯುವ ನೀರಿನ ಪೈಪ್‌ಲೈನ್‌ಗಳ ಕಾಮಗಾರಿಯಿಂದ ಸಾವಿರಾರು ಕುಟುಂಬಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಅಮರ ನಾಯಕ ಶಾಸಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಭಾರತ್ ಜೋಡೋ ಸಂಘಟನೆಗಳ ರಚನೆ ಹಾಗೂ ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದ ಶಾಸಕರು, ಅರಣ್ಯ ಪ್ರದೇಶದಲ್ಲಿ ಈಗಾಗಲೇ ನಿರ್ಮಿಸಿರುವ ಮನೆಗಳ ಸಂಪೂರ್ಣ ವಿವರ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಿ.ಬಿ. ರಂಗನಗೌಡ್ರ ಸೇರಿ ತಾಲೂಕಿನ ವಿವಿಧ ಗ್ರಾಪಂಗಳ ಆಡಳಿತಾಧಿಕಾರಿಗಳು ಹಾಗೂ ಪಿಡಿಒಗಳು ಉಪಸ್ಥಿತರಿದ್ದರು.ತಾಲೂಕಿನ ಕೆಲವು ಗ್ರಾಪಂಗಳ ಪಿಡಿಒಗಳು ಸಾರ್ವಜನಿಕರಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ ಹಾಗೂ ದೂರವಾಣಿ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಕಚೇರಿಗೆ ಬಂದಾಗ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. -ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಸಚೇತಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ