ನರಗುಂದ: ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಗ್ರಾಪಂ ಅಧಿಕಾರಿಗಳು ಕುಡಿವ ನೀರು, ಚರಂಡಿ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ರೇಣುಕಾ ಕೊರವನವರ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ನಿರಂತರವಾಗಿ ಸ್ವಚ್ಛಗೊಳಿಸುವುದರ ಮೂಲಕ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತಾಗಬೇಕು.ಕುಡಿವ ನೀರಿನ ಮೂಲಗಳ ನೀರಿನ ಪರೀಕ್ಷೆ ನಡೆಸಿ ಗ್ರಾಮಸ್ಥರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಡಾ. ಪ್ರವೀಣ ನಿಡಗುಂದಿ ಮಾತನಾಡಿ, ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಉಲ್ಬಣಗೊಳ್ಳುತ್ತದೆ.ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಳೆ ನೀರು ನಿಂತು ದುರ್ವಾಸನೆ ಬೀರದಂತೆ ಮುನ್ನಚ್ಚರಿಕೆ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.ತಾಪಂ ಅಧಿಕಾರಿ ಸೋಮಶೇಖರ ಬಿರಾದಾರ ಮಾತನಾಡಿ, ಮಳೆಗಾಲದಲ್ಲಿ ಗ್ರಾಮೀಣ ಪ್ರದೇಶಗಳ ಪರಿಸರ ಶುಚಿಯಾಗಿಟ್ಟುಕೊಳ್ಳುವುದರ ಮೂಲಕ ಮಳೆ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಮುನ್ನೆಚ್ಛರಿಕೆ ಕ್ರಮಕೈಗೊಳ್ಳುವುದು ಮುಖ್ಯವಾಗಿದೆ ಎಂದರು.
ಕಾರ್ಯಾಗಾರದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಸಂತೋಷಕುಮಾರ್ ಪಾಟೀಲ್, ಪಂಚಾಯತಿ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮಾ ಹಾದಿಮನಿ, ಜಗದೇವಪ್ಪ ಬಿ, ಗ್ರಾಪಂ ಪಿಡಿಓ, ಗ್ರಾಪಂ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುವ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಪಂ ಸ್ವಚ್ಛತಾಗಾರರು ಇದ್ದರು.