ಗದಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಿಂದ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿಕೊಳ್ಳದ ಹಾಗೆ ಕ್ರಮವಹಿಸಲು ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲ ಒಎಚ್‌ಟಿಗಳನ್ನು ನಿಯಮಿತವಾಗಿ ಸರಿಯಾಗಿ ಸ್ವಚ್ಛಗೊಳಿಸಲು ಕ್ರಮ ವಹಿಸಬೇಕು. ಒಎಚ್‌ಟಿಗಳಲ್ಲಿ ಶೇಖರಿಸಿದ ನೀರನ್ನು ಕ್ರಮಬದ್ಧವಾಗಿ ಕ್ಲೋರಿನೇಷನ್ ಮಾಡಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದರು.
ಕೆಎಫ್‌ಡಿ ನಿಯಂತ್ರಣಕ್ಕೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ಜಿಲ್ಲೆಯಲ್ಲಿ ಸರಾಸರಿ 1000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದ ಲಸಿಕೆಯನ್ನು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಿಡಲು ನಿರ್ದೇಶಿಸಿದರು. ನಾಯಿ ಕಡಿತ ಪ್ರಕರಣಗಳನ್ನು ಹತೋಟಿಯಲ್ಲಿಡಲು ಎಬಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಹಾಗೂ ಒಂದು ತಂಡವನ್ನು ರಚಿಸಿ ಮಾಂಸದ ಅಂಗಡಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ತಿಳಿಸುವಂತೆ ಪಶು ಸಂಗೋಪನಾ ಇಲಾಖೆಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶನ ನೀಡಿದರು.ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ಸೊಳ್ಳೆಗಳಿಂದ ಹರಡುಬಹುದಾದ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ಹಾಗೂ ಮೆದುಳುಜ್ವರದ ಪ್ರಕರಣಗಳನ್ನು ತಡೆಗಟ್ಟಲು ಚರಂಡಿ, ಗಟಾರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ಲಾರ್ವಾ ಸಮೀಕ್ಷೆಯನ್ನು ತೀವ್ರಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ್ ಮಾತನಾಡಿ, ಜಿಲ್ಲೆಯಲ್ಲಿ 2024ರಲ್ಲಿ 410 ಡೆಂಘೀ ಪ್ರಕರಣಗಳು ಹಾಗೂ 14 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆ ಕೂಡ ಕೆಎಫ್‌ಡಿ ಬಾಧಿತ ಎಂಡಮಿಕ್ ಜಿಲ್ಲೆಯಾಗಿದ್ದು, ಕೆಎಫ್‌ಡಿ ವೈರಸ್‌ನಿಂದ ಸೋಂಕಿತಗೊಂಡ ಉಣ್ಣೆ ಕಚ್ಚುವುದರಿಂದ ಹರಡುವ ವೈರಲ್ ಜ್ವರವಾಗಿದೆ. ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಜಿಲ್ಲೆಯಿಂದ ಈಗಾಗಲೇ 11 ರಕ್ತದ ಮಾದರಿಗಳನ್ನು ಹಾಗೂ 16-ಟಿಕ್‌ಪೂಲ್ ಮಾದರಿಗಳನ್ನು ಕೆಎಫ್‌ಡಿ ವೈರಸ್ ಪತ್ತೆಗಾಗಿ ವಿಡಿಎಲ್ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲ ರಕ್ತದ ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದ್ದು, ಟಿಕ್‌ಪೂಲ್ ಮಾದರಿಗಳ ಫಲಿತಾಂಶ ನಿರೀಕ್ಷಣೆಯಲ್ಲಿವೆ. ಜಿಲ್ಲೆಯಲ್ಲಿ ಯಾವುದೇ ಮಂಗಗಳ ಸಾವಿನ ವರದಿಯಾಗಿಲ್ಲ ಎಂದರು.ಜಿಲ್ಲೆಯಲ್ಲಿ 2024ರಲ್ಲಿ ಒಟ್ಟು 206 ಹಾವು ಕಡಿತದ ಪ್ರಕರಣಗಳು ವರದಿಯಾಗಿದ್ದು, ಲಸಿಕೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಿಡಲು ನಿರ್ದೇಶಿಸಿದರು. ಹಾವು ಕಡಿತದ ಹೊಸದಾಗಿ ನಿರ್ದೇಶನಾಲಯದ ಮಾರ್ಗಸೂಚಿಯನ್ನು ಅನುಸರಿಸಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ತರಬೇತಿ ನೀಡಲು ಹಾಗೂ ರಾಷ್ಟ್ರೀಯ ಅಯೋಡಿನ್ ಕೊರತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಯೋಡಿನ್ ಮಹತ್ವ ತಿಳಿಸುವ ಆರೋಗ್ಯ ಶಿಕ್ಷಣವನ್ನು ನೀಡಲು ಸೂಚಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.