ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ನೆರೆಯಿಂದ ಯಾವುದೇ ಅನಾಹುತಗಳಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಈ ಅವಧಿಯಲ್ಲಿ ಕಂಡುಬರುವ ಸಮಸ್ಯೆ ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24x7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ತಿಳಿಸಿದರು.
ಶಿರೂರುನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ತಿಂಗಳ ಅಂತ್ಯದಲ್ಲಿ ಮುಕ್ತಾಯಗೊಳಿಸಲಾಗುವುದು, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಡ್ರಜ್ಜಿಂಗ್ ಕೈಗೊಳ್ಳಲಾಗುವುದು. ಅಪಾಯಕಾರಿ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಝೋನ್ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.
ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಸುರಕ್ಷತೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಬೇಕು. ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಅವರು, ಜಿಲ್ಲೆಯಲ್ಲಿನ ಸೇತುವೆಗಳು, ಕಾಲು ಸಂಕಗಳ ದೃಢತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವರ್ಚುವಲ್ ಮೂಲಕ ಜಿಪಂ ಸಿಇಓ ಡಾ. ದಿಲೀಷ್ ಶಶಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಪಂ ಇಒಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.