ಪ್ರಕೃತಿ ವಿಕೋಪ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ವೆಂಕಟೇಶ್

KannadaprabhaNewsNetwork |  
Published : May 10, 2024, 01:34 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್   | Kannada Prabha

ಸಾರಾಂಶ

ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ, ಅಗತ್ಯ ಕ್ರಮಗಳಿಗಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಮುಂಗಾರು, ಪೂರ್ವ ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ದಶಕಗಳಿಂದೀಚೆಗೆ ಜಿಲ್ಲೆಯಲ್ಲಿ ಸಂಭವಿಸಿರಬಹುದಾದ ಮಳೆ ಅನಾಹುತಗಳನ್ನು ಗಮನದಲ್ಲಿರಿಸಿಕೊಂಡು, ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಸಿದ್ಧ ಪಡಿಸಿ, ಅಗತ್ಯ ಕ್ರಮಗಳಿಗಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸುವಂತೆ ಅವರು ಸೂಚಿಸಿದರು.ವಿಶೇಷವಾಗಿ ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ, ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳ ಅಧಿಕಾರಿಗಳು ಸಂಭಾವ್ಯ ಅವಘಡಗಳ ನಿಯಂತ್ರಣಕ್ಕೆ ಸಿದ್ಧರಿರಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಳೆ ನೀರು ಸಕಾಲದಲ್ಲಿ ಸಮರ್ಪಕವಾಗಿ ಹರಿದುಹೋಗದೇ ಜನಸಂಚಾರ ಮತ್ತು ಜನಜೀವನ ಅಸ್ತವ್ಯಸ್ತವಾಗುವ, ಜನ-ಜಾನುವಾರು ಪ್ರಾಣಹಾನಿ ಆಗಬಹುದಾದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರಸ್ತುತ ಚರಂಡಿಗಳಲ್ಲಿ ತುಂಬಿರುವ ಕಸವನ್ನು ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಜಿಲ್ಲಾ ಕೇಂದ್ರದಲ್ಲಿ ಎರಡು ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತಲಾ ಒಂದು ಸಹಾಯ ವಾಣಿ ಕೇಂದ್ರ ಆರಂಭಿಸಲು ಆಯಾ ತಾಲೂಕುಗಳ ತಹಶೀಲ್ದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ದಿನದ 24ಗಂಟೆಯೂ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಗತ್ಯವೆನಿಸಿದಲ್ಲಿ ಅವಘಡ ಸಂಭವಿಸಿದ ತಾಲೂಕುಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲು ಜಿಲ್ಲಾಡಳಿತ ಸಿದ್ಧವಾಗಿದೆ ಅಲ್ಲದೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರೀಕ ರಕ್ಷಣಾ ದಳ, ಗೃಹರಕ್ಷಕ ದಳ, ಆಪದ್‍ಮಿತ್ರ ಅಡಿಯಲ್ಲಿ ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಿಸಿ ಸನ್ನದ್ಧ ಸ್ಥಿತಿಯಲ್ಲಿಡಲು, ಲಭ್ಯವಿರುವ ರಕ್ಷಣಾ ಸಲಕರಣೆ ಮಾಹಿತಿ ಕ್ರೋಢೀಕರಿಸುವುದು ಹಾಗೂ ಎಲ್ಲಾ ಸಲಕರಣೆಗಳನ್ನು ಸುಸ್ಥಿತಿಯಲ್ಲಿರುವಂತೆ ಕ್ರಮವಹಿಸಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ನಿರಂತರವಾಗಿರುವಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ ಅವರು, ಮಳೆಗಾಲದಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಅಗತ್ಯವಾಗಿರುವ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಸಕಾಲದಲ್ಲಿ ರಸಗೊಬ್ಬರ ಪೂರೈಸಲು ದಾಸ್ತಾನು ಮಾಡಿಟ್ಟುಕೊಳ್ಳುವ ಬಗ್ಗೆಯೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಗಮನಹರಿಸುವಂತೆ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತೀಕ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ