ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಸಂಬಂಧಪಟ್ಟ ಇಲಾಖೆಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಸಂಬಂಧಪಟ್ಟ ಇಲಾಖೆಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತಿಯ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತಿ 2ನೇ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಮಾಧ್ಯಮಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತು ವರದಿಗಳು ಪ್ರಸಾರವಾಗುತ್ತಿದ್ದು, ಅಧಿಕಾರಿಗಳು ಸಮಸ್ಯೆ ಉಲ್ಬಣಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ಲಭ್ಯತೆ, ಪರ್ಯಾಯ ಮೂಲಗಳು ಹಾಗೂ ಅಗತ್ಯವಿರುವ ಪ್ರದೇಶಗಳ ಕುರಿತು ಸಮರ್ಪಕವಾಗಿ ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸೂಚಿಸಿದರು.ಸರ್ಕಾರಿ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ರಿಯಾಲಿಟಿ ಚೆಕ್ ಹೆಸರಿನಲ್ಲಿ ವರದಿಗಳು ಪ್ರಸಾರವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಲೋಪದೋಷಗಳು ಕಂಡುಬಂದಲ್ಲಿ ತಕ್ಷಣವೇ ಅವುಗಳನ್ನು ಸರಿಪಡಿಸಬೇಕು. ವಿಶೇಷವಾಗಿ ಗರ್ಭಿಣಿಯರು ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಮುಖಮಾಡುವಂತೆ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಅವುಗಳನ್ನು ಸುಸಜ್ಜಿತವಾಗಿಡಬೇಕು ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಂಗನವಾಡಿಗಳು ಅಗತ್ಯ ಸೌಲಭ್ಯಗಳೊಂದಿಗೆ ಸುಸಜ್ಜಿತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ಇದನ್ನು ಎಲ್ಲ ನಿಲಯಪಾಲಕರು ಕಟ್ಟುನಿಟ್ಟಾಗಿ ಪಾಲಿಸುವಂತ ಆಯಾ ಇಲಾಖೆಗಳ ಅಧಿಕಾರಿಗಳು ಸುತ್ತೋಲೆ ಹೊರಡಿಸಬೇಕು ಎಂದು ತಿಳಿಸಿದರು.ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಫಲಿತಾಂಶದ ಶೇಕಡಾವಾರು ಹೆಚ್ಚಳದ ನಿಟ್ಟಿನಲ್ಲಿ ಡಿಡಿಪಿಐ ಹೆಚ್ಚಿನ ನಿಗಾ ವಹಿಸಿ, ಅಗತ್ಯ ಶೈಕ್ಷಣಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಗಜಾನನ ಬಾಲೆ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ ಸೇರಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.