ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಡೆಂಘೀ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಡೆಂಘೀ ಮುನ್ನೆಚ್ಚರಿಕೆ, ನಿಯಂತ್ರಣ ಕ್ರಮಗಳ ಕುರಿತು ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಡೆಂಘೀ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆಯಿಲ್ಲ. ಬದಲಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಅನುಸರಿಸಿ ರೋಗದಿಂದ ದೂರ ಉಳಿಯಬೇಕು ಎಂದರು.ಮಳೆಗಾಲ ಪ್ರಾರಂಭವಾದ ನಂತರ ಡೆಂಘೀ ರೋಗವು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಂಭವ ಇದೆ. ಆದ ಕಾರಣ ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು ಅಥವಾ ಸೊಳ್ಳೆ ಬತ್ತಿ, ಮುಲಾಮು, ಇತ್ಯಾದಿ ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಉತ್ತಮ, ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರು ಶಾಲೆಗಳು ಪ್ರಾರಂಭವಾಗುವ ಮುನ್ನ ಶಾಲೆಗೆ ಭೇಟಿ ನೀಡಿ ಶಾಲೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರವನ್ನು ಶುಚಿಯಾಗಿಡಬೇಕು. ಎಲ್ಲಿಯೂ ನೀರು ನಿಲ್ಲದಂತೆ, ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ತೀವ್ರ ಜ್ವರ, ವಿಪರೀತ ತಲೆನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ ಚಿಕ್ಕ ಗುಳ್ಳೆಯ ಲಕ್ಷಣಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.