ಮಂಗನ ಕಾಯಿಲೆ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಡಿಸಿ ಹರ್ಷಲ್ ಬೊಯರ್

KannadaprabhaNewsNetwork |  
Published : Nov 29, 2026, 02:00 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಮಾತನಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕಾಡು ಮತ್ತು ತೋಟಕ್ಕೆ ತೆರಳುವಾಗ ಡೇಪಾ ಎಣ್ಣೆಯನ್ನು ಹಚ್ಚಿಕೊಳ್ಳಬೇಕು.

ಕಾರವಾರ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಈ ರೋಗ ಹರಡುವುದನ್ನು ತಡೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಸೂಚನೆ ನೀಡಿದರು.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ನಿಯಂತ್ರಣ ಕುರಿತ ಅಂತರ ಇಲಾಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿವರ್ಷ ಜಿಲ್ಲೆಯ ಸಿದ್ದಾಪುರ, ಶಿರಸಿ, ಹೊನ್ನಾವರ, ಅಂಕೋಲಾ ಮತ್ತು ಜೋಯಿಡಾ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಂಡುಬರುತ್ತಿದ್ದು, ಈ ಭಾಗದ ಸಾರ್ವಜನಿಕರಿಗೆ ಕಾಯಿಲೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ವ್ಯಾಪಕವಾಗಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಆಯೋಜಿಸುವಂತೆ ತಿಳಿಸಿದರು.

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕಾಡು ಮತ್ತು ತೋಟಕ್ಕೆ ತೆರಳುವಾಗ ಡೇಪಾ ಎಣ್ಣೆಯನ್ನು ಹಚ್ಚಿಕೊಳ್ಳಬೇಕು, ದನಕರುಗಳ ಮೈಯಿಂದ ಉಣ್ಣೆಗಳನ್ನು ತೆಗೆಯಬೇಕು ಮತ್ತು ಅವುಗಳಿಗೆ ಉಣ್ಣೆ ನಿವಾರಕ ತೈಲವನ್ನು ಲೇಪಿಸಬೇಕು. ಜ್ವರ ಬಂದಲ್ಲಿ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು, ಸ್ವಯಂ ರಕ್ಷಣೆಯಿಂದ ಮಂಗನ ಕಾಯಿಲೆ ತಡೆಗಟ್ಟಲು ಸಾಧ್ಯವಿದ್ದು, ಆರೋಗ್ಯ ಇಲಾಖೆಯಿಂದ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಔಷಧಗಗಳು ಮತ್ತು ಡೇಪಾ ತೈಲದ ದಾಸ್ತಾನು ಸಾಕಷ್ಟು ಸಂಖ್ಯೆಯಲ್ಲಿ ಇರುವಂತೆ ಎಚ್ಚರವಹಿಸಬೇಕು. ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಶುಪಾಲನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯತೆ ಹೊಂದಿದ್ದು, ಕಾಯಿಲೆ ನಿಯಂತ್ರಣದ ಕಾರ್ಯದಲ್ಲಿ ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಈ ವರ್ಷದಲ್ಲಿ ಇದುವರೆಗೆ ಮಂಗನ ಕಾಯಿಲೆ ಪರೀಕ್ಷೆಗಾಗಿ 3317 ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, ಇದರಲ್ಲಿ 12 ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 53 ಮಂಗಗಳ ಮರಣ ಕಂಡುಬಂದಿದ್ದು, ಇದರಲ್ಲಿ 10 ಮಂಗಳ ಅಟಾಪ್ಸಿ ಮಾಡಲಾಗಿದ್ದು, ಯಾವುದೇ ಪಾಸಿಟಿವ್ ಕಂಡುಬಂದಿಲ್ಲ ಮತ್ತು 716 ಉಣ್ಣೆಗಳನ್ನು ಸಂಗ್ರಹಿಸಿದ್ದು, ಇದರಲ್ಲಿ ಕೂಡಾ ಯಾವುದೇ ಪಾಸಿಟಿವ್ ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ ಮಾಹಿತಿ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ಕ್ಯಾ. ರಮೇಶ್‌ರಾವ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ರೈತರಿಗೆ ₹ 50 ಸಾವಿರ ಪರಿಹಾರ ನೀಡಿ
ಕಣ್ಣು ಕತ್ತಲಾದರೂ ಅಕ್ಷರಗಳ ಬೆಳಕು ಆರಲಿಲ್ಲ!