ಸಿಡಿಲು ಪರಿಣಾಮ ತಗ್ಗಿಸಲು ಮುನ್ನೆಚ್ಚರಿಕೆ ವಹಿಸಿ

KannadaprabhaNewsNetwork |  
Published : May 22, 2025, 12:52 AM IST
ಡಿಸಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮದ ಕುರಿತು ಬುಧವಾರ ಎಲ್ಲಾ ತಾಲೂಕಿನಿಂದ ನಡೆದ ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಇಂಡಿಯನ್ ಮೆಟ್ರಾಲಾಜಿಕಲ್ ಇಲಾಖೆಯ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳ ಮೂಲಕ ಮಾಹಿತಿ ನೀಡುವುದು. ಸ್ಥಳೀಯರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನ ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.-----

ಬಾಕ್ಸ್‌

ಸಿಡಿಲು ಸಂದರ್ಭ ಪಾಲಿಸಬೇಕಾದ ಅಂಶಗಳುಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಹಾಗೂ ಕಾಮನ್ ಅಲರ್ಟ್ ಪ್ರೋಟೋಕಾಲ್ ಮೂಲಕ ಬರುವ ಸಂದೇಶಗಳನ್ನು ಮೊಬೈಲ್‌ನಲ್ಲಿ ಗಮನಿಸಿ. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳ ಆಶ್ರಯ ಪಡೆಯುವುದು, ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು, ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯುವುದು, ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ್ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು, ಗುಂಪಿನಲ್ಲಿದ್ದರೆ ಅಪಾಯ ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳುವುದು, ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆ ಬಗ್ಗಿಸಿ ಕಿವಿ ಮುಚ್ಚಿಕೊಳ್ಳುವುದು, ಲೋಹದ ವಸ್ತುಗಳು, ದ್ವಿಚಕ್ರ ವಾಹನ, ದೂರವಾಣಿ ಬಳಸಬಾರದು, ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ