ಗದಗ: ಜಿಲ್ಲೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಅಂದು ಬೆಳಗ್ಗೆ 7.30ಕ್ಕೆ ನಗರಸಭೆ ಪಪೂ ಕಾಲೇಜ ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆಳಗ್ಗೆ 9 ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕಾಗುತ್ತದೆ. ಆ ನಂತರ ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ.ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ., ಜಿಪಂ ಯೋಜನಾಧಿಕಾರಿ ನಿರ್ಮಲಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ. ಬಿ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪಾಟೀಲ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.