ಗದಗ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏ. 24ರಿಂದ ಮೇ 8ರ ವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಅವ್ಯವಹಾರ, ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಶಿಸ್ತು ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ತಿಳಿಸಿದರು.ಪ್ರತಿಬಂಧಕಾಜ್ಞೆ ಜಾರಿ:ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏ. 24ರಿಂದ ಮೇ 8ರ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಈ ಪತ್ರಿಬಂಧಕಾಜ್ಞೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಾತನಾಡಿ, ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳನ್ನು ಯಾವುದೇ ಅಕ್ರಮಕ್ಕೆ ಆಸ್ಪದ ನೀಡದೇ ಪಾರದರ್ಶಕವಾಗಿ ಜರುಗಿಸಬೇಕೆಂದು ತಿಳಿಸಿದರು.
ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಮಾತನಾಡಿ, ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಸುಗಮವಾಗಿ ಜರುಗಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ, ಸಿ.ಸಿ.ಟಿವಿ ಅಳವಡಿಕೆ, ಸೂಕ್ತ ಬಂದೋಬಸ್ತ್ ಕುರಿತು ಚರ್ಚಿಸಲಾಯಿತು.
ಈ ವೇಳೆ ಡಯಟ್ ಪ್ರಾಂಶುಪಾಲ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.