ಫಲಾನುಭವಿಗಳಿಗೆ ಸೌಲಭ್ಯ ಶೀಘ್ರ ತಲುಪಿಸಲು ಕ್ರಮವಹಿಸಿ: ಪ್ರಶಾಂತಕುಮಾರ್ ಮಿಶ್ರಾ

KannadaprabhaNewsNetwork |  
Published : Aug 20, 2024, 01:04 AM IST
ಬಳ್ಳಾರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್  ಕುಮಾರ್ ಅವರು ಭಾಗವಹಿಸಿ ಅಧಿಕಾರಿಗಳ ಜೊತೆ ಚರ್ಚಿಸಿದರು.  | Kannada Prabha

ಸಾರಾಂಶ

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಳ್ಳಾರಿ: ರಾಜ್ಯ ಮತ್ತು ಕೇಂದ್ರ ವಲಯ ವಿವಿಧ ಯೋಜನೆಗಳಡಿ ಪ್ರಸಕ್ತ ವರ್ಷಕ್ಕಾಗಿ ಹಂಚಿಕೆಯಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ನಿಗದಿತ ಉದ್ದೇಶಕ್ಕಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜುಲೈ-2024ರ ಅಂತ್ಯದವರೆಗಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನೊಳಗೊಂಡಂತೆ ಹಲವು ಇಲಾಖೆಗಳು ನಿಗದಿತ ಗುರಿ ಸಾಧನೆ ಮಾಡಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಹಂಚಿಕೆ ಯೋಜನೆಗೆ ವಿವಿಧ ಇಲಾಖಾವಾರು ಯೋಜನೆಗಳ ಕುರಿತು ಹೆಚ್ಚು ಪ್ರಚಾರ ನೀಡಬೇಕು. ಆಯಾ ಸ್ಥಳೀಯ ಶಾಸಕರ ಸಮ್ಮುಖದಲ್ಲಿ ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಯಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಶೀಘ್ರ ತಲುಪಿಸಲು ಕ್ರಮವಹಿಸಬೇಕು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ (ಎಸ್‌ಸಿಎಸ್‌ಪಿ) ಯೋಜನೆಯಡಿ ಜುಲೈ ಅಂತ್ಯದ ವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ ₹7003.99 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಪೈಕಿ ₹5522.28 ಲಕ್ಷ ಖರ್ಚಾಗಿದ್ದು, ಶೇ. 79ರಷ್ಟು ಪ್ರಗತಿಯಾಗಿದೆ ಎಂದು ಅವರು ತಿಳಿಸಿದರು.

ಅದೇ ರೀತಿ, ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್‌ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ ₹8206.72 ಲಕ್ಷ ಬಿಡುಗಡೆಯಾಗಿದ್ದು, ಆ ಪೈಕಿ ₹7531.64 ಲಕ್ಷ ಖರ್ಚಾಗಿದ್ದು, ಶೇ. 92ರಷ್ಟು ಪ್ರಗತಿಯಾಗಿದೆ ಎಂದು ಸಭೆಗೆ ತಿಳಿಸಿದರು.

ಬಾಕಿಯಿರುವ ಎಲ್ಲ ಅನುದಾನವನ್ನು ಆಗಸ್ಟ್ ಅಂತ್ಯದೊಳಗೆ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರಾಭಿವೃದ್ಧಿ ಇಲಾಖೆ, ಕೆಆರ್‌ಐಡಿಎಲ್, ಪಿಡಬ್ಲ್ಯೂಡಿ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅಭಿವೃದ್ಧಿಯನ್ನು ಸಭೆಯಲ್ಲಿ ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ