ಕನ್ನಡಪ್ರಭ ವಾರ್ತೆ ತುಮಕೂರು
ರಾಜ್ಯದಲ್ಲಿಯೇ ಅತೀ ಹೆಚ್ಚು 20 ಮೇವಿನ ಬ್ಯಾಂಕ್‌ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೇ, ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ 94 ಮಿಮೀ ವಾಡಿಕೆ ಮಳೆಯಾಗಬೇಕಿದ್ದು, 150.9 ಮಿಮೀ ಮಳೆಯಾಗಿದೆ ಎಂದರು.
ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕ ಸಂಗ್ರಹ ಇದ್ದು, ಉತ್ತಮ ಮಳೆಯಾಗಿರುವ ಕಾರಣ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗಾಗಿ 50 ರೈತ ಸಂಪರ್ಕ ಕೇಂದ್ರಗಳಿದ್ದು, ಪ್ರಸ್ತುತ ವರ್ಷ ಹೆಚ್ಚುವರಿಯಾಗಿ 11 ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸರಬರಾಜು ಸಂಸ್ಥೆಗಳಲ್ಲಿ 52,000 ಕ್ವಿಂಟಲ್ ಬಿತ್ತನೆ ಬೀಜಗಳ ಸಂಗ್ರಹವಿದ್ದು, ಇಲ್ಲಿಯವರೆಗೂ 284 ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ, ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ ಕೆಲವು ರೈತರಿಗೆ ಪರಿಹಾರ ವಿತರಣೆ ಬಾಕಿ ಇತ್ತು. ಇದರಲ್ಲಿ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಬಿತ್ತನೆ ಬೀಜಕ್ಕೆ ಜನ ಹೆಚ್ಚು ಸಮಯ ಕ್ಯೂ ನಿಲ್ಲುವುದು ತಪ್ಪಿಸಿ, ರೈತರಿಂದ ದೂರು ಬಾರದಂತೆ ಬೇಡಿಕೆಯನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಿ, ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಬರ ಸಮರ್ಪಕ ನಿರ್ವಹಣೆಗೆ ಕಂದಾಯ ಸಚಿವರ ಮೆಚ್ಚುಗೆ:
ಕಂದಾಯ ಸಚಿವ ಕೃಷ್ಣಭೈರೇಗೌಡ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ 2312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರಸುವ ಮೂಲಕ ಸಮರ್ಪಕವಾಗಿ ಪರಿಹರಿಸಲಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ. ತುಮಕೂರು ಜಿಲ್ಲೆ ಸೇರಿ ರಾಜ್ಯಾದ್ಯಂತ ಈ ಬಾರಿ ಪ್ರಾರಂಭದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.