ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂ.ಎಸ್.ಎಂ.ಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಪಂ ವತಿಯಿಂದ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದ ಅವರು, ಈ ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಅನುಭವ ಇರುವುದರಿಂದ ವಿಜಯನಗರ ಜಿಲ್ಲೆಯ ಬಗ್ಗೆ ಪೂರ್ಣ ಮಾಹಿತಿ ಇದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ದಾಖಲೆಯಲ್ಲಿರುವ ಅಂಕಿ-ಅಂಶಗಳನ್ನು ವಾಚನ ಮಾಡುವ ಬದಲು ತಮ್ಮ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಮುಕ್ತವಾಗಿ ಸಭೆಯಲ್ಲಿ ಚರ್ಚಿಸಬೇಕು ಎಂದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವ ಬಗ್ಗೆಯೂ ಮಾಹಿತಿ ಪಡೆದರು.ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಆಗದಂತೆ, ಕಾಮಗಾರಿ ಪೂರ್ಣಗೊಳಿಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯ ಪೀಡಿತರಾಗದಂತೆ ವಾಂತಿ ಭೇದಿ ಪ್ರಕರಣಗಳು, ಮಕ್ಕಳಲ್ಲಿ ಚರ್ಮ ಸಂಬಂಧಿತ ಸಮಸ್ಯೆಗಳು ಆಗದಂತೆ ನಿಗಾ ವಹಿಸಬೇಕು. ಹೆಚ್ಚು ನೈರ್ಮಲ್ಯತೆಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ನಿಗದಿತ ವೇಳೆಗೆ ಸಮವಸ್ತ್ರ ವಿತರಣೆ, ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಾರ್ಡನ್‌ಗಳ ನಿಯೋಜನೆಗೆ ಗಮನ ಹರಿಸುವಂತೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರನಾಯ್ಕ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಒಟ್ಟು 66 ತಜ್ಞ ವೈದ್ಯರ ಕೊರತೆ ಇದೆ. ಅದರಲ್ಲೂ ಅನಸ್ತೇಶಿಯಾ ವೈದ್ಯರ ಅಗತ್ಯವಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಹೊರಗುತ್ತಿಗೆ ಅಧಾರದಲ್ಲಿ ವೈದ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಿದರು ಸೇವೆಗೆ ಮುಂದಾಗುತ್ತಿಲ್ಲ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಹೊಸಪೇಟೆ ಸಹಾಯಕ ಆಯುಕ್ತ ಪಿ.ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ, ಜಿಲ್ಲೆಯ ಎಲ್ಲಾ ತಹಸೀಲ್ದಾರರು, ತಾಪಂ ಇಒಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.