ರಾಮನಗರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಾಗೂ ವಸತಿ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ 2024ರ ಅಕ್ಟೋಬರ್ 22ರಿಂದ 28ರವರೆಗೆ 3 ನಗರಸಭೆ, 2 ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಇನ್‌ಸ್ಯಾನಿಟರಿ ಲ್ಯಾಟ್ರಿನ್ಸ್ ಗಳ ಇರುವಿಕೆ ಬಗ್ಗೆ ಸಮರ್ಪಕ ರೀತಿಯಲ್ಲಿ ಸಮೀಕ್ಷೆ ಮಾಡುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಪೌರ ಕಾರ್ಮಿಕರು ರಸ್ತೆ ಬದಿ ಕುಳಿತು ಊಟ ಮಾಡುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಬೆಳಗಿನ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ರಾಮನಗರ ಹಾಗೂ ಕನಕಪುರ ನಗರಸಭೆ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹ ನಿರ್ಮಿಸಲಾಗಿರುತ್ತದೆ. ಚನ್ನಪಟ್ಟಣ, ಮಾಗಡಿ ಹಾಗೂ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹ ಸ್ಥಾಪಿಸಲು ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿಶ್ರಾಂತಿ ಗೃಹಗಳನ್ನು ಶೀಘ್ರವಾಗಿ ನಿರ್ಮಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.ಪೌರ ಕಾರ್ಮಿಕರು/ ಸ್ಪಚ್ಛತಾ ಕಾರ್ಮಿಕರಿಗೆ ಹೆಪಟೈಟಿಸ್-ಬಿ, ಟಿ.ಬಿ., ಅಸ್ತಮಾ ಹಾಗೂ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು ನಿಯಮಿತವಾಗಿ ನಡೆಸಬೇಕು ಹಾಗೂ ಪೌರಕಾರ್ಮಿಕರು ಕಾರ್ಯನಿರ್ವಹಿಸಲು ಅವಶ್ಯವಿರುವ ಮಾಸ್ಕ್, ಗ್ಲೌಸ್, ಇತರೆ ಸಲಕರಣೆ-ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಬ್ಯಾಂಕ್ ಖಾತೆ ಇಲ್ಲದ ಪೌರ ಕಾರ್ಮಿಕರಿಗೆ ಕಡ್ಡಾಯವಾಗಿ ಒಂದು ವಾರದೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬ್ಯಾಂಕ್ ಖಾತೆ ತೆರೆದು, ವೇತನ ಹಾಗೂ ಜೀವ ವಿಮೆ ಮಾಡಿಸಬೇಕು ಎಂದು ಯಶವಂತ್ ವಿ.ಗುರುಕರ್ ಸೂಚಿಸಿದರು.ಸಭೆಯಲ್ಲಿ ಎಸ್ಪಿ ರಾಮಚಂದ್ರಯ್ಯ, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಉಪವಿಭಾಗಾಧಿಕಾರಿ ಬಿನೋಯ್, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪ ಎಸ್., ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಅನುಷ್ಠಾನದ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಆರ್. ನಾಗರಾಜು, ಡಾ. ಲೋಕೇಶ್, ಅಂಜನ ಮೂರ್ತಿ, ಕುಮಾರ ವೈ.ಎನ್., ವನಜ, ಜೀವನ್ ಮೂರ್ತಿ, ಚಲಪತಿ ಸೇರಿದಂತೆ ನಗರಸಭೆಗಳ ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
28ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.