ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಂಡು ಬರುವಂತಹ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನೀರಿನ ಶುದ್ಧತೆ ಕಾಪಾಡುವುದು ಅತ್ಯಗತ್ಯ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರಬರಾಜು ಮಾಡಲಾಗುತ್ತಿರುವ ನೀರಿನ ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು. ನೀರು ಸರಬರಾಜು ಮಾಡುವ ಕೊಳವೆಬಾವಿಗಳಿಗೆ ನಿಯಮಿತವಾಗಿ ಕ್ಲೋರಿನೇಷನ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಜಿಲ್ಲೆಯ ಸಮಸ್ಯಾತ್ಮಕ ಗ್ರಾಮಗಳಲ್ಲಿ ನೀರಿನ ಅಭಾವ ನೀಗಿಸಲು ತುರ್ತು ಕುಡಿಯುವ ನೀರಿನ ಯೋಜನೆಯಡಿ ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಹೊಸದಾಗಿ ಕೊರೆಸಿದ ಎಲ್ಲ ಕೊಳವೆಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರಲ್ಲದೆ, ವಿಫಲವಾಗಿರುವ ಕೊಳವೆಬಾವಿಗಳಿಂದ ಅವಘಡಗಳು ಸಂಭವಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಜಲ್ ಜೀವನ್ ಮಿಷನ್ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು ಕಾಮಗಾರಿಗಳ ಕಾಲಾವಕಾಶ ವಿಸ್ತರಣೆ ಇಓಟಿ ಹಾಗೂ ವರ್ಕ್ ಸ್ಲಿಪ್‌ಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಎಕ್ಸಿಕ್ಯೂಟಿವ್ ಎಂಜಿನಿಯರ್ ದೃಢೀಕರಣದೊಂದಿಗೆ ಸಕಾಲದಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು. ಜಲ್ ಜೀವನ್ ಮಿಷನ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಿಪಿಟ್ ಸಂಸ್ಥೆಯಿಂದ ಪೈಪುಗಳ ಗುಣಮಟ್ಟ ಪರಿಶೀಲಿಸಿ ವರದಿ ನೀಡಲು 60 ದಿನಗಳಿಗಿಂತ ಮೇಲ್ಪಟ್ಟು ವಿಳಂಬವಾದಲ್ಲಿ, ಸೂಕ್ತ ಕಾರಣ ನೀಡುವಂತೆ ಪತ್ರ ಬರೆದು ಕೂಡಲೇ ಸಮಗ್ರ ವರದಿ ನೀಡುವಂತೆ ನಿರ್ದೇಶಿಸಿದ ಅವರು, ಜಲ್ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಂಡಿರುವ ಹಳ್ಳಿಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಹರ್ ಘರ್ ಜಲ್ ಗ್ರಾಮಗಳೆಂದು ಘೋಷಣೆ ಮಾಡಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.