ನಾಳೆ ತಲಕಾವೇರಿ ತೀರ್ಥೋದ್ಭವ: ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

KannadaprabhaNewsNetwork |  
Published : Oct 16, 2024, 12:32 AM IST
ಚಿತ್ರ : 15ಎಂಡಿಕೆ3 : ಜಾತ್ರೆಗೆ ಸಜ್ಜಾಗುತ್ತಿರುವ ತಲಕಾವೇರಿ.  | Kannada Prabha

ಸಾರಾಂಶ

ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.

ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಮಾರ್ಗದ ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ.

ಪ್ರಯಾಣ:

ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‌ಗಳು ಓಡಾಡಲಿದ್ದು, ಭಕ್ತಾದಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಮೆಹಬೂಬ್ ಅಲಿ ಮಾಹಿತಿ ನೀಡಿದ್ದಾರೆ.

ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಭಕ್ತಾಧಿಗಳ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪೂರ್ವ ಸಿದ್ಧತೆ ಸಂಬಂಧ ಪರಿಶೀಲನೆ ನಡೆಸಿದ್ದಾರೆ.

ಮದ್ಯ ಮಾರಾಟ ನಿಷೇಧ:ತಲಕಾವೇರಿ ತೀರ್ಥೋದ್ಭವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಮಧ್ಯರಾತ್ರಿ 12ರ ವರೆಗೆ ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲ ವಿಧದ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

...............................

ಪ್ಲಾಸ್ಟಿಕ್ ಬಿಂದಿಗೆ, ಬಾಟಲ್, ಕ್ಯಾನ್‌ ನಿಷೇಧ]

ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆ ನಡೆಯಲಿದೆ. ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು,ಯಾತ್ರಾರ್ಥಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥ ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‌ಗಳನ್ನು ಬಳಕೆ ಮಾಡುತ್ತಿರುತ್ತಾರೆ.

ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಕಲ್ಯಾಣಿ ಮತ್ತು ಪವಿತ್ರ ಕುಂಡಿಕೆಯ ಬಳಿ ಬಳಸದಂತೆ ನಿರ್ಬಂಧಿಸಲಾಗಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ