ಸರ್ಕಾರಿ ನೌಕರರು ಜಾತಿ, ಧರ್ಮ‌ ಮಾಡೋಕೆ ಹೋಗಬಾರದು

KannadaprabhaNewsNetwork |  
Published : Jul 20, 2025, 01:18 AM IST
25 | Kannada Prabha

ಸಾರಾಂಶ

ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ.

ಕನ್ನಡಪ್ರಭ ವಾರ್ತೆ ಮೈಸೂರು

ಸರ್ಕಾರಿ ನೌಕರರು ಜಾತಿ, ಧರ್ಮ‌ ಮಾಡೋಕೆ ಹೋಗಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಶನಿವಾರ ಆಯೋಜಿಸಿದ್ದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ, ಸಮಾಜದ ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ ಎಂದರು.

ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಉತ್ತಮ ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಈಗ ಸೌಲಭ್ಯಗಳು ಬೇಕಾದಷ್ಟು ಇವೆ. ಇದನ್ನು ಅರ್ಹರಿಗೆ ತಲುಪಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಮಾತನಾಡಿ, ಪ್ರತುತ್ತ ದಿನಮಾನದಲ್ಲಿ ಗ್ರಾಮೀಣ ಮಟ್ಟದಲ್ಲೂ ಪ್ರತಿಭೆಗಳು ಹೊರ ಬರುತ್ತಿವೆ. ಇರುವ ಅವಕಾಶಗಳಲ್ಲೇ ಯಶಸ್ಸನ್ನು ಸಾಧಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ 650 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಾಸಕ ಡಿ. ರವಿಶಂಕರ್, ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ನಾಲ್ಕು ಜಿಲ್ಲೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.

----

ಕೋಟ್...

ಶಾಸಕಾಂಗ ಜಾರಿಗೆ ತರುವ ಕೆಲಸ ಕಾರ್ಯಗಳೂ ಸಾರ್ವಜನಿಕರಿಗೆ ಸರಿಯಾಗಿ ಮುಟ್ಟಲು ಕಾರ್ಯಾಂಗದಿಂದ ಪರಿಣಾಮಕಾರಿ ಅನುಷ್ಠಾನದ ಅಗತ್ಯವಿದೆ. ಈ ಎರಡೂ ಅಂಗಗಳು ಪರಸ್ಪರ ಅನ್ಯೊನತೆಯಿಂದ ಕೆಲಸ ಮಾಡಬೇಕು. ನಾವು ನಿಮ್ಮ ಪರ ಇರುತ್ತೇವೆ. ನೀವು ನಮ್ಮ ಕಾರ್ಯಕ್ರಮಗಳ ಜನರಿಗೆ ತಲುಪಿಸಲು ಮುಂದಾಗಬೇಕು.

- ಡಾ.ಎಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ

PREV

Latest Stories

ಒಂದೇ ದಿನ ಹಂಪಿಗೆ 25 ಸಾವಿರಕ್ಕೂ ಅಧಿಕ ಪ್ರವಾಸಿಗರ ಆಗಮನ
ಕಿನ್ನಿಗೋಳಿಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ
ರಾಬಕೋ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ?