ಕನ್ನಡಪ್ರಭ ವಾರ್ತೆ ಶಿರಹಟ್ಟಿ
ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದ್ದು, ಮತದಾನ ಕೇಂದ್ರಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. ಮತದಾನ ಪ್ರಕ್ರಿಯೆ ನಿಯಮಾನುಸಾರ ನಡೆಯುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಪದವೀಧರ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳುವುದು, ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸುವುದು ಹಾಗೂ ಮತದಾನದ ವೇಳೆ ನಿಗದಿತ ಗುರುತಿನ ದಾಖಲೆಗಳನ್ನು ಹೊಂದಿರುವುದು ಅಗತ್ಯವಾಗಿದೆ.ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅರ್ಹ ಪದವೀಧರ ಮತದಾರರು ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಆಡಳಿತ ಮನವಿ ಮಾಡಿದೆ.
ಚುನಾವಣಾ ಕಾರ್ಯಕ್ಕಾಗಿ ಒಟ್ಟು ೧೫ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಪಿಆರ್ಒ ಸೇರಿದಂತೆ ಐವರು ಸಿಬ್ಬಂದಿ ಒಳಗೊಂಡ ಒಂದು ಹೆಚ್ಚುವರಿ ತಂಡವನ್ನು ಕಾಯ್ದಿರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಶಿರಹಟ್ಟಿ ಮತಗಟ್ಟೆಗೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲ್ಪಟ್ಟಿರುವ ಬೆಳ್ಳಟ್ಟಿ ಮತಗಟ್ಟೆಯಲ್ಲಿ ಓರ್ವ ಪಿಎಸ್ಐ, ಓರ್ವ ಎಎಸ್ಐ ಹಾಗೂ ಮೂವರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಪದವೀಧರ ಮತಕ್ಷೇತ್ರದ ಎಲ್ಲ ಅರ್ಹ ಮತದಾರರು ತಪ್ಪದೇ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮತದಾರರು ಸಹಕರಿಸುವ ಮೂಲಕ ಶಾಂತಿಯುತ ಮತದಾನಕ್ಕೆ ಕೈಜೋಡಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವು ತಿಳಿಸಿದ್ದಾರೆ.