3 ತಿಂಗಳಿಗೊಮ್ಮೆ ತಾಲೂಕು ಗ್ಯಾರಂಟಿ ಅದಾಲತ್: ಡಾ. ಪುಷ್ಪಾ ಅಮರನಾಥ್

KannadaprabhaNewsNetwork | Published : Jan 11, 2025 12:49 AM

ಸಾರಾಂಶ

ಕಾಪುವಿನಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಹಾಗೂ ಪ್ರಥಮ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹೇಳಿದರು.

ಅವರು ಶುಕ್ರವಾರ ಕಾಪುವಿನಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಹಾಗೂ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿ ತಿಂಗಳಿಗೊಮ್ಮೆ ತಾಲೂಕು ಗ್ಯಾರಂಟಿ ಸಮಿತಿಯು ಪ್ರಗತಿ ಪರಿಶೀಲನೆ ಸಭೆ ನಡೆಸಿ, ವರದಿಯನ್ನು ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಪ್ರತೀ ಮೂರು ತಿಂಗಳಿಗೊಮ್ಮೆ ಗ್ಯಾರಂಟಿ ಅದಾಲತ್ ಹಮ್ಮಿಕೊಂಡು, ಕುಂದುಕೊರತೆಗಳಿದ್ದಲ್ಲಿ ಸ್ಥಳದಲ್ಲಿಯೇ ಪರಿಹಾರ ಮಾಡಬೇಕು ಎಂದರು.

ಮುಖಂಡರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಯ ಸಮ್ಮೇಳನವನ್ನು ಆಯೋಜಿಸಿ, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪದೇ ಇರುವ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಯೋಜನೆಗಳನ್ನುಅನುಷ್ಠಾನ ಮಾಡುವಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಉಪಸ್ಥಿತರಿದ್ದರು. ಕಾಪು ತಾಲೂಕು ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಎಸ್. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಪು ತಾಲೂಕು ತಹಸೀಲ್ದಾರ್ ಪ್ರತಿಭಾ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ, ಸ್ಥಾಯಿ ಸಮಿತಿಯ ಅಧ್ಯಕ್ಷ ಅನಿಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನೆ, ಕಾಪು ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾಪು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವ ಸ್ವಾಗತಿಸಿದರು. ಪ್ರಶಾಂತ್ ಹಾವಂಜೆ ನಿರೂಪಿಸಿದರು.

Share this article