ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಒತ್ತಾಯಿಸಿ ತಮಟೆ ಚಳವಳಿ

KannadaprabhaNewsNetwork |  
Published : Dec 11, 2024, 12:47 AM IST
10ಎಚ್‌ ಪಿಟಿ1 ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಸಮಾಜದ ಮುಖಂಡ ಬಲ್ಲಾಹುಣ್ಸಿ ರಾಮಣ್ಣ ಮಾತನಾಡಿದರು. | Kannada Prabha

ಸಾರಾಂಶ

ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಡಿ. 16ರಂದು ಬೆಳಗಾವಿಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಹೊಸಪೇಟೆ: ಸುಪ್ರೀಂ ಕೋರ್ಟ್‌ನ ತೀರ್ಪು ಬಂದು ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸಲು ಮೀನಮೇಷ ಎಣಿಸುತ್ತಿದೆ. ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಡಿ. 16ರಂದು ಬೆಳಗಾವಿಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಹಕ್ಕೊತ್ತಾಯ ಸಮಾವೇಶ ನಡೆಸಲಾಗುವುದು ಎಂದು ಮಾದಿಗ ಸಮಾಜದ ಮುಖಂಡ ಬಲ್ಲಾಹುಣ್ಸಿ ರಾಮಣ್ಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿ ಸಮಾವೇಶದ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಸೇರಿದಂತೆ ರಾಜ್ಯದ ಎಲ್ಲ ಶಾಸಕರ ಮನೆ ಎದುರು ಡಿ. 14ರಂದು ತಮಟೆ ಚಳವಳಿ ನಡೆಸಲಾಗುವುದು. ಈ ಮೂಲಕ ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಒಳ ಮೀಸಲಾತಿ ಪರ ಧ್ವನಿ ಎತ್ತಲು ಒತ್ತಾಯಿಸಲಾಗುವುದು ಎಂದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೇ ಕಾಲ ಹರಣ ಮಾಡಲು ನ್ಯಾ. ನಾಗಮೋಹನ್‌ ದಾಸ್‌ ಆಯೋಗ ರಚನೆ ಮಾಡಿದೆ. ಈ ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ನೀಡಲಾಗಿಲ್ಲ. ಸರ್ಕಾರದ ಬಳಿ ನ್ಯಾ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ಸಮಿತಿ ವರದಿ ಇದ್ದರೂ ಒಳ ಮೀಸಲಾತಿ ಜಾರಿಗೊಳಿಸಿಲ್ಲ. ಸುಖಾಸುಮ್ಮನೆ ಈಗ ಆಯೋಗ ರಚನೆ ಮಾಡಿದೆ ಎಂದು ದೂರಿದರು.

ಒಳ ಮೀಸಲಾತಿ ಜಾರಿ ಆಗುವ ವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ, ಈ ಭರವಸೆ ಜಾರಿಯಾಗಿಲ್ಲ. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹರ್ಯಾಣದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ ತೀರ್ಪು ಬಂದ ಮೇಲೆ ಒಳ ಮೀಸಲಾತಿ ಜಾರಿಗೊಳಿಸಿದೆ. ಆದರೆ, ರಾಜ್ಯದ ಕಾಂಗ್ರೆಸ್‌ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಲು ಬದ್ಧತೆ ತೋರಿಲ್ಲ. ಸಾಮಾಜಿಕ ನ್ಯಾಯ ಎಂದು ಹೇಳುವ ಪಕ್ಷವೇ ಈಗ ಸಾಮಾಜಿಕ ನ್ಯಾಯ ಒದಗಿಸುತ್ತಿಲ್ಲ. ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಳ ಮೀಸಲಾತಿ ಜಾರಿಗೊಳಿಸಲು ಸೂಚಿಸಬೇಕು. ಎಂತಹ ಪ್ರಭಾವಿಗಳು ಪ್ರಭಾವ ಬೀರಿದರೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಮಾಡಿದೆ. ಇದರ ಲಾಭ ಎಂಜಿನಿಯರಿಂಗ್‌, ಮೆಡಿಕಲ್‌ ಸೀಟುಗಳ ಹಂಚಿಕೆಯಲ್ಲಿ ಆಗಿದೆ. ಇನ್ನೂ ಮೀಸಲು ಹೆಚ್ಚಳ ಜಾರಿ ಆಗಿಲ್ಲ ಎಂಬುದು ಶುದ್ಧ ಸುಳ್ಳಾಗಿದೆ. ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿ ಬಿದ್ದಿದೆ. ಸಮಾಜ ಹೋರಾಟದ ಹಾದಿ ಹಿಡಿದಿದೆ. ಒಳ ಮೀಸಲಾತಿ ಜಾರಿಗೊಳಿಸುವುದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ. ಆಯಾ ಜನಸಂಖ್ಯೆ ಅನುಸಾರವೇ ಮಾಧುಸ್ವಾಮಿ ಸಮಿತಿ ಆಧಾರದ ಮೇಲೆ ಹಿಂದಿನ ಸರ್ಕಾರ ವರ್ಗೀಕರಣ ಮಾಡಿದೆ. ಇದನ್ನು ಈಗಿನ ಸಿದ್ದರಾಮಯ್ಯನವರ ಸರ್ಕಾರ ಜಾರಿಗೊಳಿಸಬೇಕು ಎಂದರು.

ಮುಖಂಡರಾದ ಪೂಜಪ್ಪ, ಎಂ.ಸಿ. ವೀರಸ್ವಾಮಿ, ಎಚ್. ಶೇಷ, ನಿಂಗಪ್ಪ, ಶೇಕ್ಷಾವಲಿ, ಜಗನ್, ರಾಘವೇಂದ್ರ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’