ಒಳ ಮೀಸಲು ಜಾರಿಗೆ ಸೆ .12 ರಂದು ತಮಟೆ ಚಳವಳಿ

KannadaprabhaNewsNetwork | Published : Sep 10, 2024 1:43 AM

ಸಾರಾಂಶ

ಒಳ ಮೀಸಲಾತಿಯು ಮಾದಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದು, ಅದನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೆ.12 ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಮುಖಂಡ ಶ್ರೀನಿವಾಸ ಮೂರ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಒಳ ಮೀಸಲಾತಿಯು ಮಾದಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದು, ಅದನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೆ.12 ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಮುಖಂಡ ಶ್ರೀನಿವಾಸ ಮೂರ್ತಿ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡುವಂತೆ 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಇದೀಗ ಸುಪ್ರೀಂ ಕೋರ್ಟ್ ನೀಡಿರುವ ಒಳ ಮೀಸಲಾತಿ ತೀರ್ಪಿನಂತೆ ರಾಜ್ಯ ಸರ್ಕಾರ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿ ಬಹು ಸಂಖ್ಯಾತರಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವುದು ಅಗತ್ಯವಾಗಿದೆ. ತಮಿಳುನಾಡು, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡಲು ಮುಂದಾಗಿದ್ದರೂ ನಮ್ಮ ರಾಜ್ಯ ಸರ್ಕಾರ ಈವರೆಗೂ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ದೂರಿದರು.

ನಿರ್ಲಕ್ಷ ಭಾವನೆ ವ್ಯಕ್ತಪಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧವಾಗಿ ಸೆ.12 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ತಮಟೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತರು ಬರಲಿದ್ದಾರೆ ಎಂದರು.

ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ವ್ಯಕ್ತಪಡಿಸಿದ್ದರು. ಸಮುದಾಯವು ಕೂಡ ಸಿದ್ದರಾಮಯ್ಯನವರ ಬಗ್ಗೆ ತುಂಬಾ ನಿರೀಕ್ಷೆಯನ್ನುಇಟ್ಟಿದ್ದರು. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಿ ತುಳಿತಕ್ಕೊಳಗಾದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವಂತೆ ಒತ್ತಾಯಿಸಿದರು.

ಈ ವೇಳೆ ತಾಲೂಕು ಸಂಚಾಲಕ ಓ. ಕರಿಬಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ರಾಯಪುರ ನಾಗೇಂದ್ರಪ್ಪ, ಬಿಜಿಕೆರೆ ಬಿ. ಬಸವರಾಜ, ತಾಲೂಕು ಸಂಘಟನಾ ಸಂಚಾಲಕರಾದ ದೇವಸಮುದ್ರ ಚಂದ್ರಣ್ಣ, ಬಿಜಿಕೆರೆ ಸಿದ್ದಣ್ಣ, ಮೊಗಲಹಳ್ಳಿ ಸಿದ್ದಪ್ಪ. ಕೋನಸಾಗರ ನಾಗೇಂದ್ರಪ್ಪ, ನಾಗಸಮುದ್ರ ಮರಿಸ್ವಾಮಿ, ವಡೇರಹಳ್ಳಿ ಬಸವರಾಜ, ಮೊಗಲಹಳ್ಳಿ ತಿಪ್ಪೇಸ್ವಾಮಿ, ಮುತ್ತಿಗಾರ ಹಳ್ಳಿ ಮಂಜಣ್ಣ ಇತರರು ಇದ್ದರು.

Share this article