ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದಿದ್ದಾರೆ.
ನಾಮಪತ್ರ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ರಂಗಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಕಾಂಗ್ರೆಸ್ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳದೇ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಜೊತೆಗೆ ಕರೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರದ ವಿಚಾರವಾಗಿದೆ. ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದರು.
ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ವಿರುದ್ದ ಆರೋಪಿಸಿರುವ ಅವರು, ತೂಬಗೆರೆಯನ್ನು ಪದೇ ಪದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾಮಪತ್ರ ಹಿಂತೆಗೆದುಕೊಂಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಮಾರ್ಗದರ್ಶನದಲ್ಲಿ ತೂಬಗೆರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುತ್ತೇವೆ ಎಂದರು.ತೂಬಗರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಮುಖಂಡರಾದ ಗೋಪಾಲ ನಾಯ್ಕ್, ಗಂಗಸಂದ್ರ ಶ್ರೀಧರ್, ಮುರುಳಿ, ಆರ್.ವಿ ಮಹೇಶ್ ಕುಮಾರ್, ಮುನಿರಾಜು ಮತ್ತಿತರರಿದ್ದರು.