ಉತ್ತಮ ಪರಿಸರ ನಿರ್ಮಾಣ ಹಾಗೂ ಅದರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ
ಸಂಡೂರು: ಉತ್ತಮ ಪರಿಸರದಿಂದ ಮಾತ್ರ ಆರೋಗ್ಯಯುತ ಜೀವನ ಸಾಧ್ಯ. ಉತ್ತಮ ಪರಿಸರ ನಿರ್ಮಾಣ ಹಾಗೂ ಅದರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕಿ ಅನ್ನಪೂರ್ಣ ಈ ತುಕಾರಾಂ ಅವರು ಅಭಿಪ್ರಾಯಪಟ್ಟರು.
ತಾಲೂಕಿನ ಎಂ.ತುಂಬರಗುದ್ದಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಟ್ಟು ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
೨,೮೩,೫೨೩ ಗಿಡ ನೆಡುವ ಗುರಿ:
ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ೨,೮೩,೫೨೩ ಗಿಡಗಳನ್ನು ನೆಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಶಾಲೆಯಲ್ಲಿ ಉತ್ತಮ ಪರಿಸರವನ್ನು ನಿರ್ಮಿಸಲಾಗಿದೆ. ಶಾಲೆಯ ಆವರಣದಲ್ಲಿರುವ ಗಿಡಮರಗಳನ್ನು ವಿದ್ಯಾರ್ಥಿಗಳು ದತ್ತು ತೆಗೆದುಕೊಂಡು ಅವುಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಪುಸ್ತಕ ಪ್ರೇಮಿ ಡಾ.ಬಿ.ಆರ್. ಅಂಬೇಡ್ಕರ್ ಗ್ರಂಥಾಲಯ ಉದ್ಘಾಟನೆ:
ಶಾಲೆಯ ಎಸ್‌ಡಿಎಂಸಿ ಉತ್ತಮ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ಕಾರ ಉತ್ತಮ ಎಸ್‌ಡಿಎಂಸಿ ಎಂದು ಘೋಷಿಸಿ, ಒಂದು ಲಕ್ಷ ಅನುದಾನ ನೀಡಿದ್ದನ್ನು ಬಳಸಿಕೊಂಡು, ಶಾಲೆಯಲ್ಲಿ ನಿರ್ಮಿಸಲಾಗಿರುವ ಪುಸ್ತಕ ಪ್ರೇಮಿ ಡಾ.ಬಿ.ಆರ್. ಅಂಬೇಡ್ಕರ್ ಗ್ರಂಥಾಲಯವನ್ನು ಉದ್ಘಾಟಿಸಿದ ಶಾಸಕರು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳ ಜೊತೆಗೆ ಸಾಹಿತ್ಯದ ಕುರಿತು ಆಸಕ್ತಿ ಮೂಡಿಸುವಂತಹ ಗ್ರಂಥಗಳನ್ನು ಗ್ರಂಥಾಲಯದಲ್ಲಿ ಒದಗಿಸಲು ಸೂಚಿಸಿದರು.
ಶಾಲಾ ಕೊಠಡಿಗಳ ಉದ್ಘಾಟನೆ:
ಶಾಸಕರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಆರ್‌ಇಡಿ ಇಲಾಖೆಯ ಅನುದಾನ ₹೩೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ೨ ಶಾಲಾ ಕೊಠಡಿ ಹಾಗೂ ಪ್ರೌಢ ಶಾಲೆಯಲ್ಲಿ ₹೪೫.೬೧ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ೪ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹೬೧.೪೬ ಲಕ್ಷ ವೆಚ್ಚದಲ್ಲಿ ನಾಲ್ಕು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆಯನ್ನು ನೆರವೇರಿಸಿದರು.
ಸನ್ಮಾನ:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಎಂ.ತುಂಬರಗುದ್ದಿಯ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಹಾಗೂ ಅರಣ್ಯ ರಕ್ಷಣೆಯಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಕ್ಷೇತ್ರ ಸಿಬ್ಬಂದಿಗಳನ್ನು ಶಾಸಕರು ಸನ್ಮಾನಿಸಿದರು.
ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ, ದಕ್ಷಿಣ ವಲಯ ಅರಣ್ಯಾಧಿಕಾರಿ ದಾದಾ ಖಲಂದರ್, ಉತ್ತರ ವಲಯ ಅರಣ್ಯಾಧಿಕಾರಿ ಎಸ್.ಬಿ. ಮಂಜುನಾಥ್, ಅರಣ್ಯ ಇಲಾಖೆ ಸಿಬ್ಬಂದಿ, ಸಿಡಿಪಿಒ ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಕೆ. ವೆಂಕಟೇಶ್, ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹನುಮಪ್ಪ ನಾಯಕ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಿವರಾಜ್, ಸದಸ್ಯರು, ಮುಖ್ಯ ಶಿಕ್ಷಕ ಅಮರೇಶ ಸೊನ್ನದ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.