ಕಾರವಾರ: ಜಿಲ್ಲೆಯಲ್ಲಿ ಜು. 12ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ 9000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ವಿವಿಧ ಹಂತದ ನ್ಯಾಯಾಲಯಗಳಲ್ಲಿ 39,270 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ 9,000 ಪ್ರಕರಣಗಳನ್ನು ಪಕ್ಷಗಾರರಿಗೆ ಹೊರೆಯಾಗದಂತೆ ಶೀಘ್ರವಾಗಿ ಇತ್ಯರ್ಥ ಮಾಡುವ ಗುರಿ ಹೊಂದಲಾಗಿದೆ. ಕಳೆದ ಬಾರಿ ನಡೆದ ಲೋಕ್ ಅದಾಲತ್‌ನಲ್ಲಿ 6,111 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.ರಾಜ್ಯ ಮಟ್ಟದಲ್ಲಿ ಹಾಗೂ ವಲಯ ಮಟ್ಟದಲ್ಲಿ ಲೋಕ್ ಅದಾಲತ್ ಕುರಿತು ಸಭೆಗಳನ್ನು ನಡೆಸಲಾಗಿದ್ದು, ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಸಹಕರಿಸುವಂತೆ ಬ್ಯಾಂಕ್ ಮತ್ತು ವಿಮಾ ಕಂಪನಿಗಳಿಗೆ ಮಾಹಿತಿ ನೀಡಲಾಗಿದೆ ಹಾಗೂ 90 ದಿನಗಳ ಕಾಲ ಮೀಡಿಯೇಶನ್ ಡ್ರೈವ್ ಅಭಿಯಾನ ನಡೆಯುತ್ತಿದ್ದು, ಸಂಧಾನದ ಮುಖಾಂತರ ಹೆಚ್ಚು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಾರ್ವಜನಿಕರು ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ “ಸಾಥಿ” ಎಂಬ ಅಭಿಯಾನ ನಡೆಸಲಾಗುತ್ತಿದ್ದು, ಪರಿತ್ಯಕ್ತ ಮಕ್ಕಳಿಗೆ ಗುರುತಿನ ಚೀಟಿ, ಆಧಾರ್ ಕಾರ್ಡ್ ಒದಗಿಸುವ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಸರ್ವೆ ಕಾರ್ಯ ನಡೆದಿದ್ದು, ಯಾವುದೇ ಮಗುವು ಗುರುತಿಲ್ಲದೆ ಉಳಿಯಬಾರದು ಹಾಗೂ ಆ ಮಗುವಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.