ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ: ಮಧು ಬಂಗಾರಪ್ಪ

KannadaprabhaNewsNetwork | Published : Oct 14, 2023 1:00 AM

ಸಾರಾಂಶ

ರಾಜ್ಯದಲ್ಲಿ ಎನ್ಇಪಿ ಬದಲು ಎಸ್ಇಪಿ ಜಾರಿಗೆ ತರಲು ತಜ್ಞರ ಸಮಿತಿ ರಚಿಸಲಾಗಿದೆ
ಕನ್ನಡಪ್ರಭವಾರ್ತೆ ಸಾಗರ ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿಗೆ ಉಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿಸಿದೆ. ಶೀಘ್ರದಲ್ಲಿಯೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಜೋಸೆಫ್‌ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಗುರುವಾರ ಭೇಟಿ ನೀಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, 13500 ಶಿಕ್ಷಕರನ್ನು ಭರ್ತಿ ಮಾಡಿಕೊಂಡರೆ ಬಹುತೇಕ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ. ಮುಂದಿನ ಹಂತದಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಗಮನಹರಿಸಲಾಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಎನ್ಇಪಿ ಬದಲು ಎಸ್ಇಪಿ ಜಾರಿಗೆ ತರಲು ತಜ್ಞರ ಸಮಿತಿ ರಚಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಗಿಂತ ರಾಜ್ಯ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ರೂಪಿಸಲಾಗುತ್ತದೆ. ಮಕ್ಕಳಿಗೆ ಸ್ಥಳೀಯ ಸಂಸ್ಕೃತಿ, ಇತಿಹಾಸ ಕುರಿತು ಕಲಿಸುವ ಜೊತೆಗೆ ಅವರನ್ನು ರಾಷ್ಟ್ರೀಯ ಶಿಕ್ಷಣ ನೀತಿಗಿಂತ ಹೆಚ್ಚು ಬಲಿಷ್ಠವಾಗಿ ಸ್ಪರ್ಧಾತ್ಮಕ ಜಗತ್ತು ಎದುರಿಸಲು ಅಗತ್ಯ ಪಠ್ಯಗಳನ್ನು ಅಳವಡಿಸಲಾಗುತ್ತದೆ. ಹಾಗೆ, ನೋಡಿದರೆ ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿಯೇ ಈತನಕ ಎನ್.ಇ.ಪಿ. ಜಾರಿಗೆ ತಂದಿಲ್ಲ ಎಂದರು. ಈಗಾಗಲೇ ಕೆಲವು ಕಡೆಗಳಲ್ಲಿ ಎನ್.ಇ.ಪಿ. ಅಡಿ ಮಕ್ಕಳು ಶಿಕ್ಷಣ ಮುಂದುವರಿಸುತ್ತಿದ್ದಾರೆ. ಅವರ ಶಿಕ್ಷಣಕ್ಕೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಈ ಸಂಬಂಧ ವಾದ ಮಂಡಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಗ್ರಾಮೀಣ ಜನರು ವಾಸಿಸುವ ನೆಲದ ಹಕ್ಕು ಅವರಿಗೆ ಕೊಡಲು 94 ಸಿಸಿಯಡಿ ಹಕ್ಕುಪತ್ರ ವಿತರಿಸಲಾಗುತ್ತಿದೆ. ಕಂದಾಯ ಭೂಮಿ ಯಾವುದು, ಅರಣ್ಯಭೂಮಿ ಯಾವುದು ಎನ್ನುವ ಕುರಿತು ಸರ್ವೆ ನಡೆಸಲು ಸಹ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು. - - - (-ಫೋಟೋ: ಮಧು ಬಂಗಾರಪ್ಪ)

Share this article