ಜಿಲ್ಲಾಡಳಿತ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಡಾ. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಶಿಕ್ಷಕರು ವಿದ್ಯಾರ್ಥಿಗಳ ರೋಲ್ ಮಾಡೆಲ್ ಆಗಿರುತ್ತಾರೆ. ಅದಕ್ಕೆ ಯೋಗ್ಯರಾಗಿರುವುದು ಶಿಕ್ಷಕರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಅವರು ಗುರುವಾರ ಜಿಲ್ಲಾಡಳಿತ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಡಾ. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಕಾಲೇಜಿನ ಪ್ರಾಧ್ಯಾಪಕರಿಗಿಂತಲೂ ತಮಗೆ ಪಾಠ ಮಾಡಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ. ಕಾರಣ ಶಿಕ್ಷಕರು ದಿನದ 8 ಗಂಟೆಗಳ ಕಾಲ ತಮ್ಮೆದುರು ಇರುತ್ತಾರೆ. ಅವರೆದುರು ಶಿಕ್ಷರರು ಆದರ್ಶಪ್ರಾಯರಾಗಿ ನಡೆದುಕೊಳ್ಳಬೇಕಾಗುತ್ತದೆ. 18-20ನೇ ವರ್ಷದಲ್ಲಿ ಮಕ್ಕಳು ಹಾದಿ ತಪ್ಪಿ ಸಮಾಜಘಾತುಕರಾಗದಂತೆ ಶಿಕ್ಷಕರು ಅವರನ್ನು ರೂಪಿಸಬೇಕು ಎಂದು ಕರೆ ನೀಡಿದರು.ಮುಖ್ಯ ಅತಿಥಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜದಲ್ಲಿ ಗೌರವ ಇಟ್ಟುಕೊಂಡ ವ್ಯವಸ್ಥೆಯೆಂದರೆ ಶಿಕ್ಷಣ ಮತ್ತು ಶಿಕ್ಷಕರು. ವಿದ್ಯಾರ್ಥಿಗಳ ಏಳಿಗೆಯಲ್ಲಿ ತಮ್ಮ ಯಶಸ್ಸನ್ನು ಕಂಡುಕೊಳ್ಳುವ ಶಿಕ್ಷಕರು ಮಾತ್ರ ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ ಎಂದರು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಮು.ಕಾ.ನಿ. ಅಧಿಕಾರಿ ಪ್ರತೀಕ್ ಬಾಯಲ್, ಎಸ್ಪಿ ಡಾ.ಅರುಣ್ ಕುಮಾರ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ಉಡುಪಿ ವಲಯದ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.ಅಧ್ಯಕ್ಷತೆಯನ್ನು ಶಾಸಕ ಯಶ್ಪಾಲ್ ಎ. ಸುವರ್ಣ ವಹಿಸಿದ್ದರು. ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ಶಿಕ್ಷಕರ ವಿವಿಧ ಸಂಘಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ಗಣಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಮತ್ತು ಜ್ಯೋತಿ ನಿರೂಪಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಂದಿಸಿದರು.
-----ಶೇ.100 ಫಲಿತಾಂಶದ ಗುರಿ ಸಾಧಿಸಿ
ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಕಳೆದ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ರಷ್ಟು ಫಲಿತಾಂಶ, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಶಿಕ್ಷಕರ ಪ್ರಾಮಾಣಿಕ ಮತ್ತು ಮನಥಪೂರ್ವಕ ಕರ್ತವ್ಯದ ಪ್ರತೀಕವಾಗಿದೆ. ಮುಂದಿನ ಬಾರಿ ಶೇ.100ರಷ್ಟು ಫಲಿತಾಂಶ ಗುರಿ ನಿಮ್ಮ ಎದುರಿದೆ. ಸರಿಯಾಗಿ ಯೋಜಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಡಿಸಿ ಡಾ.ವಿದ್ಯಾಕುಮಾರಿ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.