ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಅಪರ ಆಯುಕ್ತರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಮತ್ತು ಅನುಷ್ಠಾನ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡದೆ, ಎಲ್ಲರನ್ನೂ ಪ್ರೀತಿಯಿಂದ ಕಂಡು ಪ್ರೋತ್ಸಾಹಿಸಿ, ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ತುಂಬಿದಲ್ಲಿ ಅದೇ ಮಕ್ಕಳು ಮುಂದೆ ದೇಶವನ್ನೇ ಆಳುವ ನಾಯಕರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ಪಾಲಕರು ಕೂಡ ಮಕ್ಕಳೊಂದಿಗೆ ಬೆರೆತು ಓದಲು ಕುಳಿತುಕೊಂಡು ಮಾರ್ಗದರ್ಶನ ಮಾಡಿದಲ್ಲಿ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕೂಡ ಜ್ಞಾನಕ್ಕಾಗಿ ಓದಬೇಕು, ಅದು ಜೀವನದ ಕೊನೆಯವರೆಗೂ ಉಳಿಯುವ ಅಸ್ತ್ರವಾಗಿದೆ ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಭಯ ಇಟ್ಟುಕೊಳ್ಳದೆ, ಮಾನಸಿಕ ಆರೋಗ್ಯ ಕಾಪಾಡಿಕೊಂಡು ಗುರಿ ಸಾಧಿಸಬೇಕು. ಪ್ರೌಢಶಾಲಾ ಹಂತದಲ್ಲಿಯೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುವ ಸಂಭವ ಇರುವುದರಿಂದ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಬೆರೆತು ವಿದ್ಯಾರ್ಥಿಗಳ ಪ್ರತಿಭೆ ಹೊರ ತರಲು ಪ್ರಯತ್ನಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಫಲಿತಾಂಶ ಸುಧಾರಣೆಗೆ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ವಾತಾವರಣದ ಸ್ಥಿತಿಗತಿ ಅವಲೋಕನ ಮಾಡಿ, ಲೋಪದೋಷ ಸರಿಪಡಿಸುವ ಕೆಲಸ ಮಾಡಬೇಕು. ಕಲಿಯುವ ಮಕ್ಕಳಿಗೆ ವಾತಾವರಣ ಕೂಡ ಅನಕೂಲಕರವಾಗಿರಬೇಕಾಗಿದೆ ಎಂದರು,