ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ತಮ್ಮಯ್ಯ

KannadaprabhaNewsNetwork | Published : Mar 28, 2024 12:55 AM

ಸಾರಾಂಶ

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಲೋಕಸಭಾ ಚುನಾವಣಾ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್‌.ಡಿ.ತಮ್ಮಯ್ಯ ಅವರು ಭಾಗವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಮನೆ ಮನೆಗಳಿಗೂ ತಲುಪಿಸುವ ಕೆಲಸವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ನಡೆದ ಲೋಕಸಭಾ ಚುನಾವಣಾ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಭಾವನೆಗಳ ಹೆಸರಿನಲ್ಲಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಯನ್ನು ಶಾಶ್ವತವಾಗಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದು ಕಾಂಗ್ರೆಸ್ ಪಕ್ಷದ ಗುರಿ ಯಾಗಬೇಕು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಲೋಕಸಭಾ ಚುನಾವಣೆ ಮುಗಿಯುವ ತನಕ ವಿಶ್ರಮಿಸದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ಗೆಲುವಿಗೆ ದುಡಿಯುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅನ್ನಭಾಗ್ಯ, ಉಚಿತ ವಿದ್ಯುತ್, ಗೃಹಲಕ್ಷ್ಮಿ,ಯುವನಿಧಿ, ಶಕ್ತಿ ಯೋಜನೆಗಳು ಜನರ ಮನಸ್ಸನ್ನು ತಲುಪಿದ್ದು, ಅವುಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಬೂತ್ ಅಧ್ಯಕ್ಷರು ಗಳು ಮಾಡಬೇಕು ಎಂದು ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರ ಬಂದು 10 ವರ್ಷಗಳಾದರೂ ಜಿಲ್ಲೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ತಿರಸ್ಕರಿಸುವ ಕೆಲಸವನ್ನು ಜಿಲ್ಲೆಯ ಜನರು ಮಾಡಬೇಕು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಅವರು ಈ ಹಿಂದೆ ಸಂಸತ್ ಸದಸ್ಯರಾಗಿ ಕಡಿಮೆ ಅವಧಿಯಲ್ಲಿ ಆಯ್ಕೆಯಾದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಕರೆ ನೀಡಿದರು.

ನಗರದಲ್ಲಿ ಐದು ವಾರ್ಡಿಗೆ ಒಬ್ಬರು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗೆ ಎರಡು ಜನರನ್ನು ವೀಕ್ಷಕರನ್ನಾಗಿ ನೇಮಿಸುವಂತೆ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮನವರಿಕೆ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಇಂದು ಸಂಜೆ ಅಥವಾ ನಾಳೆ ವೀಕ್ಷಕರನ್ನಾಗಿ ನೇಮಿಸುತ್ತೇನೆ ಎಂದು ಸಭೆಯಲ್ಲಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಮಹಮದ್, ನಗರಾಧ್ಯಕ್ಷ ತನೋಜ್, ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್ ಬೆಟ್ಟಗೆರೆ, ನಗರಸಭಾ ಸದಸ್ಯರಾದ ಶಾದಬ್, ಲಕ್ಷ್ಮಣ್, ಜಾವಿದ್, ಇಂದಿರಾ ಶಂಕರ್, ಪರಮೇಶ್, ಗುರುಮಲ್ಲಪ್ಪ, ಪಕ್ಷದ ಮುಖಂಡರಾದ ನೂರಿ, ರಸೂಲ್ ಖಾನ್, ಸೋಮಣ್ಣ, ಮೋಹನ್ ಕುಮಾರ್, ಶ್ರೀಕಾಂತ್, ನಾಗಭೂಷಣ್, ಅನ್ಸರ್, ರಾಮಚಂದ್ರ, ಸುರೇಶ್, ಪ್ರಸಾದ್ ಅಮಿನ್, ಜಗದೀಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Share this article