ಜಿಲ್ಲಾ ಕಾರ್ಯನಿರತ ಪತ್ರಕರ್ತರ ದಿನಾಚರಣೆ । ಶಾಸಕರ ನಿಧಿಯಿಂದ ಹಣ ನೀಡಿಕೆಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದ ಮುಂದುವರಿದ ಕಾಮಗಾರಿಗೆ ಶಾಸಕರ ನಿಧಿಯಿಂದ 10 ಲಕ್ಷ ರು. ನೀಡುವುದಾಗಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಘೋಷಣೆ ಮಾಡಿದರು. ನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಉತ್ತಮ ಪತ್ರಕರ್ತರು ಇದ್ದಾರೆ. ಸ್ವಾಭಿಮಾನದ ಪತ್ರಿಕೋದ್ಯಮದ ನಡೆಸುವ ಮೂಲಕ ತಮ್ಮದೇ ಅದ ಛಾಪು ಮೂಡಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿ, ಜಿಲ್ಲೆಯ ಅಭಿವೃದ್ಧಿಗೆ ಅವರು ಸಹ ಕಾರಣೀಭೂತರಾಗಿದ್ದಾರೆ. ಸಮಾಜಕ್ಕೆ ಪತ್ರಕರ್ತರ ಸೇವೆ ಅತ್ಯಗತ್ಯವಾಗಿದೆ ಎಂದು ಹೇಳಿದರು. ನಿವೇಶನ ನೀಡಲು ಪ್ರಮಾಣಿಕ ಯತ್ನ:ಜಿಲ್ಲೆಯ ಪತ್ರಕರ್ತರು ನಿವೇಶನ ನೀಡುವುದು ಬಹಳ ದಿನಗಳ ಬೇಡಿಕೆಯಾಗಿದೆ. ಇದನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ವಿಶ್ವಾರ್ಹತೆಯನ್ನು ಉಳಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಸಾಮಾಜಿಕ ಹಾಗೂ ದ್ಯಶ್ಯ ಮಾಧ್ಯಮಗಳಕ್ಕಿಂತ ಮುದ್ರಣ ಮಾಧ್ಯಮ ಇನ್ನೂ ಹೆಚ್ಚಿನ ವಿಶ್ವಾಸವನ್ನು ಉಳಿಸಿಕೊಂಡು ಹೋಗುತ್ತಿದೆ. ಮುದ್ರಣ ಮಾಧ್ಯಮ ಇನ್ನೂ ಹೆಚ್ಚು ವಿಶ್ವಾರ್ಹತೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಸ್ನೇಹಿಯಾಗಿದ್ದು, ಬಹಳಷ್ಟು ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಮೂರು ದಶಕಗಳಿಂದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಪತ್ರಕರ್ತರ ಸಮಸ್ಯೆಗಳು ಹಾಗೂ ವಿವಿಧ ಜಿಲ್ಲೆಗಳ ಪತ್ರಕರ್ತರ ಭವನಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದರು. ಬೆಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಮಾತನಾಡಿ, ಪತ್ರಕರ್ತರು ಆರೋಗ್ಯವನ್ನು ಲೆಕ್ಕಿಸದೆ ದಿನದ 24 ಗಂಟೆಯೂ ಕೆಲಸ ಮಾಡುತ್ತಾರೆ. ಇವರ ರಕ್ಷಕರಂತೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಕರ್ತರ ಪರ ಕೆಲಸ ಮಾಡಿದ್ದಾರೆ. ಪತ್ರಕರ್ತರ ಕಲ್ಯಾಣ, ಆರೋಗ್ಯ ನಿಧಿಗಾಗಿ 10 ಕೋಟಿ ರು. ಕೇಳಿದ್ದು, ಅದರ ಬಗ್ಗೆ ವಾರ್ತಾ ಇಲಾಖೆಮಟ್ಟದಲ್ಲಿ ಸಭೆ ನಡೆಯುತ್ತಿದೆ. ಚಾಮರಾಜನಗರ ಜಿಲ್ಲೆಯ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯಿಂದ ಜಿಲ್ಲೆಯ ಪತ್ರಕರ್ತರಿಗೆ ಸಿಗುವಂತಾಗಬೇಕು. ಜಿಲ್ಲೆಯಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಪ್ರಾತಿನಿಧ್ಯ ಕೊಡಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಮಾತನಾಡಿ, ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಹಾಗೂ ಗ್ರಾಮಾಂತರ ಪತ್ರಕರ್ತರಿಗೆ ಬಸ್ ಪಾಸ್ ಹಾಗೂ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅವರು ಸ್ವಾಭಿಮಾನದಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುವ ವಾತಾವರಣ ನಿರ್ಮಾಣ ಮಾಡಬೇಕು ಎಂದರು. ಪತ್ರಕರ್ತರಿಗೆ ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಡಾ.ಬಿ.ಟಿ. ಕವಿತಾ ಅವರು ಪತ್ರಕರ್ತರು ಹಾಗೂ ಕುಟುಂಬದವರಿಗೆ ಬಹುಮಾನ ವಿತರಿಸಿ ಮಾತನಾಡಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು, ವರ್ತಕರ ಸಂಘದ ಅಧ್ಯಕ್ಷ ಎಚ್.ಬಿ.ರಾಜಶೇಖರ್, ರಾಜ್ಯ ಪರಿಷತ್ ಸದಸ್ಯ ಗೂಳಿಪುರ ನಂದೀಶ್ ಇದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್ ಸ್ವಾಗತಿಸಿದರು. ಕೆ.ಎಸ್.ಬನಶಂಕರ ಆರಾಧ್ಯ ನಿರೂಪಿಸಿದರು.
ಚಾಮರಾಜನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ವಿವಿಧ ದತ್ತಿ ಪ್ರಶಸ್ತಿ ಪುರಸ್ಕ್ಥತರನ್ನು ಸನ್ಮಾನಿಸಲಾಯಿತು.