ಒಳ ಮೀಸಲು ಜಾರಿಗಾಗಿ ಒತ್ತಾಯಿಸಿ ಸೆ.12ಕ್ಕೆ ತಮಟೆ ಚಳವಳಿ

KannadaprabhaNewsNetwork |  
Published : Sep 10, 2024, 01:40 AM IST
ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿಯವರು ಪತ್ರಿಕಾಗೋಷ್ಟಿಯಲ್ಲಿ ಚಳವಳಿಯ ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನಗೊಳಿಸದೇ ನಿದ್ದೆ ಹೊಡೆಯುತ್ತಿದೆ. ಈ ಸರ್ಕಾರವನ್ನು ಬಡಿದೆಬ್ಬಿಸಲು ಸೆ.12ಕ್ಕೆ ಈ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದುಎಂ.ಗುರುಮೂರ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸೆ.12 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಏಕಕಾಲದಲ್ಲಿ ತಮಟೆ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಆ.1ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಇದರಲ್ಲಿ ಒಳ ಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ತೀರ್ಪನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನ ಗೊಳಿಸದೇ ಸುಮ್ಮನೆ ಇದೆ. ಒಂದು ರೀತಿಯಲ್ಲಿ ಸರ್ಕಾರ ನಿದ್ದೆ ಹೊಡೆಯುತ್ತಿದೆ. ಈ ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜೊತೆಗೆ ಜೂ.9ರ ಡಿಎಸ್ ಎಸ್ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸ ಬೇಕು, ಪ್ರೊ..ಕೃಷ್ಣಪ್ಪನವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಬಾಕಿ ಉಳಿದಿರುವ ಬ್ಯಾಕ್ ಲ್ಯಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು, ಬಗರ್‌ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಪಡಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಶಿವಬಸಪ್ಪ, ಚಂದ್ರಣ್ಣ ಜೋಗಿ, ಬಿ.ಎ.ಕಾಟ್ಟೆ, ಎಂ. ಏಳುಕೋಟಿ, ನಾಗರಾಜ್, ಬೊಮ್ಮನಕಟ್ಟೆ ಕೃಷ್ಣ, ರಮೇಶ್ ಚಿಕ್ಕಮರಡಿ, ಶ್ರೀನಿವಾಸ್, ಹಸೂಡಿ ಬಸವರಾಜ್, ಹರಿಗೆ ರವಿ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ