ಹಾರೋಹಳ್ಳಿ: ಮಹಿಳೆಯರು ಸಾಮಾಜಿಕ ಆರ್ಥಿಕ ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರ ಸೇರಿದಂತೆ ಸರ್ವರಂಗಗಳಲ್ಲಿಯೂ ಪ್ರಗತಿ ಸಾಧಿಸಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದುತ್ತದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಾಗರತ್ನ ಬಂಜಗೆರೆ ಹೇಳಿದರು
ಹಾರೋಹಳ್ಳಿ: ಮಹಿಳೆಯರು ಸಾಮಾಜಿಕ ಆರ್ಥಿಕ ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರ ಸೇರಿದಂತೆ ಸರ್ವರಂಗಗಳಲ್ಲಿಯೂ ಪ್ರಗತಿ ಸಾಧಿಸಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದುತ್ತದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಾಗರತ್ನ ಬಂಜಗೆರೆ ಹೇಳಿದರು.
ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಹಾಗೂ ಕಾಲೇಜಿನ ಕನ್ನಡ ವಿಭಾಗ ಸಾಂಸ್ಕೃತಿಕ ಸಮಿತಿ ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದೊಂದಿಗೆ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಷ್ಟ್ರದ ಪ್ರಗತಿಗೆ ಪುರುಷರಷ್ಟೇ ಮಹಿಳೆಯರು ಸಹ ಸಾಮಾಜಿಕ ಆರ್ಥಿಕ ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರ ಸೇರಿದಂತೆ ಸರ್ವ ರಂಗಗಳಲ್ಲಿಯೂ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸಿದಾಗ ಮಾತ್ರ ರಾಷ್ಟ್ರದ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಕಿಶೋರ ಮಾತನಾಡಿ, ಶಕ್ತಿ ಧೈರ್ಯ ಮತ್ತು ಸಹಾನುಭೂತಿಯ ಸಾಂಕೇತವಾಗಿ ಕುಟುಂಬ ಮತ್ತು ಸಮಾಜವನ್ನು ಕ್ರಿಯಾಶೀಲವಾಗಿ ಪ್ರಗತಿಯತ್ತ ಮುನ್ನಡೆಸುತ್ತಿರುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸಿ ಸಂವಿಧಾನಬದ್ಧ ಹಕ್ಕುಗಳನ್ನು ನೀಡಿ ಸಾಧನೆಯ ಶಿಖರವನ್ನೇರಲು ಅಗತ್ಯ ಸಹಕಾರ ನೀಡುವ ಮೂಲಕ ಶಿಕ್ಷಣ ಮತ್ತು ಸಮಾನ ಅವಕಾಶಗಳನ್ನು ನೀಡಿ ಗೌರವಿಸಬೇಕು ಎಂದು ತಿಳಿಸಿದರು.
ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಚಂದ್ರ ಮಾತನಾಡಿ, ಮಹಿಳೆಯರ ಹಕ್ಕುಗಳು, ಸಮಾನತೆ ಹಾಗೂ ಸುರಕ್ಷತೆಯನ್ನು ಕಾನೂನು ಪ್ರಕಾರ ಜಾರಿಗೊಳಿಸಿ ಮಹಿಳೆಯರಲ್ಲಿರುವ ನಾಯಕತ್ವವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಆ ಮೂಲಕ ಸಮಾಜದಲ್ಲಿ ನೆಮ್ಮದಿಯಿಂದ ಬದುಕು ಕಟ್ಟಿಕೊಂಡು ಸಾಧಕಿ ಆಗುವಂತೆ ಮಾಡುವುದೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮೂಲ ಉದ್ದೇಶವಾಗಿದೆ. ನಾವೆಲ್ಲರೂ ಮಹಿಳೆಯರನ್ನು ಗೌರವಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸಿ.ವಿ.ಅನಿತಾ, ಟಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಹಾಗೂ ಪ್ರಾಧ್ಯಾಪಕರಾದ ಗೀತಾ, ಶೋಭಾ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎಸ್ ಮುರಳೀಧರ್, ಮಿಲಿಯನ್ ಸ್ಟಾರ್ ಸಿಂಗರ್ ನಗೆಮಳೆರಾಜ ಚoದ್ರಾಜ್ , ಸಹಾಯಕ ಪ್ರಾಧ್ಯಾಪಕರಾದ ಡಾ.ಸಿ.ವಿ. ಅನಿತಾ , ಡಾ.ಬಿ.ಉಮೇಶ್ , ಡಾ.ಆರ್.ರವಿಕುಮಾರ್, ಡಾ.ಎಚ್.ಆರ್.ಲಕ್ಷ್ಮಮ್ಮ , ಡಾ.ಎಸ್.ಆರ್. ಗೀತಾ ,ಡಾ.ಎಸ್.ಶೋಭಾ , ರೂಪಾ ಬಾಯಿ, ಶ್ವೇತಾ, ಟ್ರಸ್ಟ್ ಕಾರ್ಯದರ್ಶಿ ಎಂ.ನಾಗೇಶ ಉಪಸ್ಥಿತರಿದ್ದರು.
8ಕೆಆರ್ ಎಂಎನ್ 2.ಜೆಪಿಜಿ
ಹಾರೋಹಳ್ಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸಿ.ವಿ.ಅನಿತಾ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.