ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮ ಸರಿಯಲ್ಲ

KannadaprabhaNewsNetwork |  
Published : Aug 18, 2024, 01:52 AM IST
ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ | Kannada Prabha

ಸಾರಾಂಶ

ಹನೂರು ರಾಜ್ಯಪಾಲರು ರಾಜಕೀಯ ಪಕ್ಷದ ಮುಖಂಡರಂತೆ ವರ್ತಿಸುತ್ತಿದ್ದಾರೆ ಅವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಮಾಜಿ ಶಾಸಕ ನರೇಂದ್ರ ಒತ್ತಾಯಿಸಿದ್ದಾರೆ.

ಹನೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ಆಗ್ರಹಿಸಿದರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಕಿಡಿಕಾರಿದರು.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರವಾದ ಆಡಳಿತ ನೀಡುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ. ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮಾಜಿ ಶಾಸಕರು ಮುಖಂಡರುಗಳು ಕಾರ್ಯಕರ್ತರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಯಲ್ಲಿಯೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...