ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಾಂಗ್ರೆಸ್, ಬಿಜೆಪಿ ಪಕ್ಷಗಳ ಬಾವುಟ, ನಾಯಕರ ಭಾವಚಿತ್ರಗಳನ್ನು ಹಿಡಿದು ಭಾಗವಹಿಸಿ, ಕುಣಿದು ಕುಪ್ಪಳಿಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಬೋಸ್, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎಸ್.ಬಾಲರಾಜು ತಮ್ಮ ಪಕ್ಷದ ಅಪಾರ ಬೆಂಬಲಿಗರೊಂದಿಗೆ ಮೆರಣಿಗೆಯಲ್ಲಿ ತೆರಳಿ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಸಿಎಂ, ಸಚಿವರು ಭಾಗಿ: ಬೆಳಗ್ಗೆ 11 ಗಂಟೆಯ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಸತೀಶ್ ಚಾರಕಿಹೊಳಿ, ಕೆ.ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮುರ್ತಿ, ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಯಣ, ಅನಿಲ್ ಚಿಕ್ಕಮಾದು, ಕೆ. ರವಿಶಂಕರ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಸಂಸದ ಶಿವಣ್ಣ, ಮಾಜಿ ಶಾಸಕರಾದ ಎಸ್. ಜಯಣ್ಣ, ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ವಿಜಯೇಂದ್ರ, ಜಿಟಿಡಿ ಸಾಥ್:ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಸದಾನಂದಗೌಡ, ಶಾಸಕರಾದ ಜಿ.ಟಿ. ದೇವೇಗೌಡ, ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್, ಜಿಲ್ಲಾ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್, ಜಿಲ್ಲಾ ಸಂಚಾಲಕ ಪ್ರೊ.ಕೆ.ಆರ್.ಮಲ್ಲಿಕಾರ್ಜುಪ್ಪ, ಕೇಂದ್ರ ಬರಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಎಸ್. ಮಹದೇವಯ್ಯ, ಪ್ರಧಾನ ಕಾರ್ಯದರ್ಶಿ ಪಿ. ವೃಷಬೇಂದ್ರಪ್ಪ ಅನೇಕರು ಭಾಗವಹಿಸಿದ್ದರು. ಬೆಳಗ್ಗೆಯಿಂದ ಬಿಸಿಲನ ಬೇಗೆ ಹೆಚ್ಚಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸುಡುವ ಬಿಸಿಲಿನಲ್ಲಿಯೇ ಮೆರವಣಿಗೆಯಲ್ಲಿ ಸಾಗುವ ಜೊತೆಗೆ ನಾಯಕರ ಪರ ಜೈಕಾರ ಕೂಗಿದರು. ದಾರಿಯುದ್ದ ಕಾರ್ಯಕರ್ತರಿಗೆ ನೀರು, ಮಜ್ಜಿಗೆಯನ್ನು ವಿತರಣೆ ಮಾಡಲಾಯಿತು. ಜಿಲ್ಲಾಡಳಿತ ಭವನದ ಮುಂಭಾಗದ ಜನಜಾತ್ರೆ ಸೇರಿತ್ತು. ಸಾಕಷ್ಟು ಪ್ರಮಾಣದಲ್ಲಿ ಆಗಮಿಸಿದ್ದ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹೈರಾಣರಾದರು.