ದಾವಣಗೆರೆ: ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ನಿಜ. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪ್ರತಿ ವರ್ಷ ₹4.5 ಲಕ್ಷ ಕೋಟಿ ರು. ತೆರಿಗೆ ಹೋಗುತ್ತದೆ. ಆದರೆ, ಅದರಲ್ಲಿ ಕೇಂದ್ರವು ರಾಜ್ಯಕ್ಕೆ ನೀಡುತ್ತಿರುವುದು ಕೇವಲ ₹40-₹50 ಸಾವಿರ ಕೋಟಿ ರು. ಮಾತ್ರ. ಅದನ್ನು ಯಾವುದೇ ಯೋಜನೆ, ಕಾರ್ಯಕ್ರಮಕ್ಕೆಂದು ಸರಿಯಾಗಿ ನೀಡುತ್ತಿಲ್ಲ ಎಂದು ದೂರಿದರು.ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹಿನ್ನೆಲೆ ಕೇಂದ್ರ ಸರ್ಕಾರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟ ನಡೆಸುತ್ತಿದ್ದಾರೆ. ನಾವೂ ಮಾಧ್ಯಮ ಇತರೆ ವೇದಿಕೆಗಳ ಮೂಲಕ ನಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದೇವೆ. ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ನ್ಯಾಯವಾದ ಅನುದಾನ ಮೊದಲು ಬಿಡುಗಡೆ ಮಾಡಲಿ ಎಂದು ಈಶ್ವರ ಖಂಡ್ರೆ ಆಗ್ರಹಿಸಿದರು.
ಎಸ್‌ಎಸ್ ಪ್ರಯತ್ನ, ಒಂದಾಗುವತ್ತ ಪಂಚ ಪೀಠ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಪಂಚ ಪೀಠಾಧೀಶರು ಒಂದಾಗುತ್ತಿರುವ ವಿಚಾರ ಅವರ ಅಸಂಖ್ಯಾತ ಅಭಿಮಾನಿಗಳು, ಅನುಯಾಯಿಗಳು, ಭಕ್ತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಹಿಸುದ್ದಿಯಾಗಿದೆ. ಇಂಥದ್ದೊಂದು ಮಹತ್ಕಾರ್ಯಕ್ಕೆ ಮುಂದಾಗಿರುವ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದರು.
ಅಭಾವೀಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ:ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಗುರುವಾರ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದರು. ಮಹಾಸಭಾದ ಅಭಿವೃದ್ಧಿ ಹಾಗೂ ಸರ್ಕಾರದಿಂದ ಹಮ್ಮಿಕೊಂಡಿರುವ 2 ವರ್ಷಗಳ ಸಾಧನ ಸಮಾವೇಶದ ರೂಪುರೇಷೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಈ ಸಂದರ್ಭ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಮಾಜಿ ಪಾಲಿಕೆ ಸದಸ್ಯರು ಸೇರಿದಂತೆ ಇತರರು ಇದ್ದರು.- - -
-ಫೋಟೋ: ಈಶ್ವರ ಖಂಡ್ರೆ