ಕನ್ನಡಪ್ರಭ ವಾರ್ತೆ ಶಿರಾ
ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಕಾಂಗ್ರೆಸ್ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.ನಗರದ ಕಾಡುಗೊಲ್ಲ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿ.ಯು.ಸಿಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಡತ ವಾಪಸು ರಾಜ್ಯಕ್ಕೆ ಬಂದಿದೆ. ಆದ್ದರಿಂದ ಶೀಘ್ರದಲ್ಲಿಯೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಸಚಿವರನ್ನು ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಕಾಡುಗೊಲ್ಲ ಎಂಬ ಜನಾಂಗವನ್ನು ಜಾತಿಪಟ್ಟಿಗೆ ಸೇರಿಸಲು ನಾನು ಕಾನೂನು ಸಚಿವನಾಗಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಇಬ್ಬರೂ ಸೇರಿ ಕಾಡುಗೊಲ್ಲ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರದಲ್ಲಿ ಕಾಡುಗೊಲ್ಲ ಎಂದು ಸೇರಿಸಲು ಕ್ರಮ ವಹಿಸಿದ್ದೇವೆ ಎಂದು ತಿಳಿಸಿದರು.15 ದಿನದಲ್ಲಿ ಆಧುನಿಕ ವಧಾಗಾರ ಉದ್ಘಾಟನೆ: ತಾಲೂಕಿನಲ್ಲಿ ಅತಿ ಹೆಚ್ಚು ಕುರಿ, ಮೇಕೆಗಳನ್ನು ಸಾಕಾಣಿಕೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಚೀಲನಹಳ್ಳಿಯಲ್ಲಿ 60 ಕೋಟಿ ರು. ವೆಚ್ಚದಲ್ಲಿ ಆಧುನಿಕ ವಧಾಗಾರ ನಿರ್ಮಿಸಿದ್ದು, ಅದನ್ನು ಹದಿನೈದು ದಿನಗಳೊಳಗೆ ಉದ್ಘಾಟನೆ ಮಾಡಲಿದ್ದೇವೆ. ಇದರಿಂದ ಕುರಿಗಾಹಿಗಳಿಗೆ, ರೈತರಿಗೆ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ಎಲ್ಲಾ ವರ್ಗದ ಜಾತಿ ಮತ್ತು ಜನಾಂಗದವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮೂಲಕ ಸಂಘಟಿತರಾಗುತ್ತಿರುವುದು ಶ್ಲಾಘನೀಯ. ಕಾಡುಗೊಲ್ಲ ಸಮುದಾಯ ಶ್ರಮಜೀವಿಗಳು. ಸ್ವಾತಂತ್ರ್ಯ ಬಂದು 78 ವರ್ಷವಾದರೂ ಕಾಡುಗೊಲ್ಲ ಸಮುದಾಯಕ್ಕೆ ಉತ್ತಮ ಮೂಲಭೂತ ಸೌಲಭ್ಯ ಸಿಕ್ಕಿಲ್ಲ. ಆಡಳಿತ ನಡೆಸುತ್ತಿರುವ ಸರ್ಕಾರಗಳು ಕಾಡುಗೊಲ್ಲ ಸಮುದಾಯವನ್ನು ನಿರ್ಲಕ್ಷ್ಯ ಮಾಡಿವೆ ಎಂದರು.ಎಸ್ಸೆಸ್ಸೆಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಶ್ರೀ ಬಸವ ರಮಾನಂದ ಸ್ವಾಮೀಜಿ, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ, ತೆಂಗು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು, ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಕೆ.ಈಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಮುಖಂಡರಾದ ರಂಗಸ್ವಾಮಿ, ಮದ್ದಕ್ಕನಹಳ್ಳಿ ರೇವಣ್ಣ ಹಾಜರಿದ್ದರು.